ನೈಸ್ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿ, ಸಂಚಾರ ಅಸ್ತವ್ಯಸ್ತ
ಬೆಂಗಳೂರಿನ ನೈಸ್ ರಸ್ತೆಯ ಕನಕಪುರ ಮಾರ್ಗದಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಅವಘಡದಿಂದಾಗಿ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
diesel-tanker-overturns-catches-fire-on-bengaluru-nice-road


ಬೆಂಗಳೂರು, 18 ಅಕ್ಟೋಬರ್ (ಹಿ.ಸ.):

ನೈಸ್ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಾಹನ ಸವಾರರಲ್ಲಿ ಆತಂಕ ಉಂಟಾದ ಘಟನೆ ಕನಕಪುರ ರಸ್ತೆಯ ಅಂಜನಾಪುರ ಸಮೀಪ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಂಜನಾಪುರದ ಕಡೆಗೆ ಸಂಚರಿಸುತ್ತಿದ್ದ ಡೀಸೆಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ತಲಘಟ್ಟಪುರ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆಯ ಒಂದು ಮಾರ್ಗದ ಸಂಚಾರವನ್ನು ಸ್ಥಗಿತಗೊಳಿಸಲಾಯಿತು.

ವಾಹನಗಳ ಸಾಲು, ಸವಾರರಿಗೆ ತೊಂದರೆ

ಟ್ಯಾಂಕರ್ ಬೆಂಕಿಗಾಹುತಿಯಾದ ಪರಿಣಾಮ ನೈಸ್ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಸುಮಾರು 30 ನಿಮಿಷಗಳಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಟ್ಯಾಂಕರ್ ಪಲ್ಟಿಯಾಗಲು ನಿಖರ ಕಾರಣವೇನು ಎಂಬುದು ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.

ಘಟನೆಯಿಂದಾಗಿ ಕೆಲಕಾಲ ನೈಸ್ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande