
ಗದಗ, 19 ಅಕ್ಟೋಬರ್ (ಹಿ.ಸ.)
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಗೆಲುವಿನ ಅವಕಾಶವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ ನಡೆಸಲಾಗಿದ್ದು, ಪಕ್ಷದ ಅಧ್ಯಕ್ಷರೂ ಸಭೆ ನಡೆಸಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಅವಕಾಶ ಸಿಕ್ಕಿದೆ. ಆದರೆ, ಈ ಬಾರಿ ಮೂರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಕಾಂಗ್ರೆಸ್ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತಿದೆ. ಸರ್ಕಾರದ ಸಾಧನೆಗಳು ಹಾಗೂ ಪದವೀಧರರಿಗೆ ನೀಡಿರುವ ಕೊಡುಗೆಗಳನ್ನು ಜನರಿಗೆ ತಿಳಿಸುವ ಮೂಲಕ ಪ್ರಚಾರ ನಡೆಸಲಾಗುವುದು ಎಂದರು.
ಸ್ಟಿಂಗ್ ಆಪರೇಷನ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ
ಸ್ಟಿಂಗ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಬಗ್ಗೆ ನನಗೆ ಎಬಿಸಿಡಿಯೂ ಗೊತ್ತಿಲ್ಲ. ಸಂಪೂರ್ಣ ಮಾಹಿತಿ ಇಲ್ಲದ ಕಾರಣ ಈ ವಿಚಾರದಿಂದ ದೂರ ಇರಲು ಬಯಸುತ್ತೇನೆ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬರಲಿ, ಬಳಿಕ ಸರ್ಕಾರ ಸಾರ್ವಜನಿಕವಾಗಿ ಮಾಹಿತಿ ನೀಡಲಿದೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಹೊಣೆ ಕೇಂದ್ರದ್ದು
ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಸಚಿವರು, ಈ ಸಮಸ್ಯೆಯ ಪರಿಹಾರದ ಚೆಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಕಬ್ಬಿನ ಬೆಲೆ ಹೆಚ್ಚಳವಾದರೆ ಸಕ್ಕರೆ ಕಾರ್ಖಾನೆಗಳಿಗೂ ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಕಳೆದ ಏಳು ವರ್ಷಗಳಿಂದ ಸಕ್ಕರೆ ಬೆಲೆ ಹೆಚ್ಚಳವಾಗದ ಕಾರಣ ಅಸಮತೋಲನ ಉಂಟಾಗಿದೆ. ಪ್ರತಿವರ್ಷ ಕಬ್ಬಿನ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೂ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಶಕ್ತಿ ಕೇಂದ್ರ ಸರ್ಕಾರಕ್ಕಿದೆ. ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಂಡರೆ ರೈತರ ಧರಣಿ ಅಂತ್ಯಗೊಳ್ಳಲು ಸಹಕಾರಿಯಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / lalita MP