
ಹುಬ್ಬಳ್ಳಿ, 19 ಅಕ್ಟೋಬರ್ (ಹಿ.ಸ.):
ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ಮುಖಂಡರಾದ ಚೂನಪ್ಪ ಪೂಜೇರಿ, ಶಶಿಕಾಂತ ಗುರೂಜಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಡುವೆ ನಡೆದ ಮಾತುಕತೆ ಅತ್ಯಂತ ಸಮಾಧಾನಕರವಾಗಿ ನಡೆದಿರುವುದು ಅಭಿನಂದನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಭೆಯ ಮೂಲಕ ರೈತರು ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಮತ್ತು ಕಾನೂನುಬದ್ಧವಾಗಿ ಮಂಡಿಸುವವರು ಎಂಬುದು ಸಾಬೀತಾಗಿದೆ. ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸಭೆಯಲ್ಲಿ ಉಪಸ್ಥಿತರಿದ್ದ ಇತರ ಜನಪ್ರತಿನಿಧಿಗಳಿಗೂ ಅಭಿನಂದನೆಗಳು. ರೈತ ಸಮುದಾಯ ಹಾಗೂ ರೈತ ಮುಖಂಡರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ರೈತರ ಸಮಸ್ಯೆಗಳು ಆದಷ್ಟು ಬೇಗ ಸಂಪೂರ್ಣವಾಗಿ ಬಗೆಹರಿಯಲಿ ಎಂದು ದಸರಾ ಹಬ್ಬದ ಸಂದರ್ಭದಲ್ಲಿ ಜಗನ್ಮಾತೆಯಲ್ಲಿ ಪ್ರಾರ್ಥಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.