
ನವದೆಹಲಿ, 19 ಅಕ್ಟೋಬರ್ (ಹಿ.ಸ.):
ಎದೆ ಸೋಂಕಿನ ಸಮಸ್ಯೆಯಿಂದ ಇಲ್ಲಿನ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
98 ವರ್ಷದ ಅಡ್ವಾಣಿ ಅವರನ್ನು ಅ.16ರಂದು ಎದೆ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ, ನರರೋಗ ವಿಭಾಗದ ಹಿರಿಯ ಸಲಹೆಗಾರ ಡಾ. ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದಕ್ಕೂ ಮೊದಲು ಆಸ್ಪತ್ರೆ ಬಿಡುಗಡೆ ಮಾಡಿದ್ದ ಆರೋಗ್ಯ ವರದಿಯಲ್ಲಿ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಕಟ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿಸಲಾಗಿತ್ತು. ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಅವರ ಬೆಂಬಲಿಗರು ಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಧ್ಯಕ್ಷರಾಗಿ ಸುದೀರ್ಘ ಸೇವೆ
1980ರಲ್ಲಿ ಬಿಜೆಪಿ ಸ್ಥಾಪನೆಯಾದ ಬಳಿಕ ಪಕ್ಷದ ಅಧ್ಯಕ್ಷರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಯಕರಲ್ಲಿ ಲಾಲ್ ಕೃಷ್ಣ ಅಡ್ವಾಣಿ ಪ್ರಮುಖರಾಗಿದ್ದಾರೆ. ಅವರು 1986ರಿಂದ 1991ರವರೆಗೆ, 1993ರಿಂದ 1998ರವರೆಗೆ ಹಾಗೂ 2004ರಿಂದ 2005ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು. ಬಿಜೆಪಿಯ ಹಿಂದಿನ ಸಂಘಟನೆಯಾದ ಭಾರತೀಯ ಜನಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅಡ್ವಾಣಿ, ಜೂನ್ 2002ರಿಂದ ಮೇ 2004ರವರೆಗೆ ದೇಶದ ಉಪಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.