
ವಿಜಯಪುರ, 19 ಅಕ್ಟೋಬರ್ (ಹಿ.ಸ.)
ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ರಾವುತ ರವಿ ಹರಿಜನ (2) ಮೃತಪಟ್ಟಿದ್ದಾನೆ. ಘಟನೆಯಲ್ಲಿ ರೇಣುಕಾ ರವಿ ಹರಿಜನ (36) ಹಾಗೂ ಮಟ್ಟಿಹಾಳ ಗ್ರಾಮದ ಯಮನವ್ವ ಗಣಪತಿ ಚಲವಾದಿ (40) ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೂಡಗಿ ಎನ್ಟಿಪಿಸಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ತಳವಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande