ಬಳ್ಳಾರಿ: ಅಕ್ಟೋಬರ್ 4 ರಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ;ಅಭ್ಯರ್ಥಿಗಳಿಗೆ ಉಚಿತ ವಸತಿ
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ದಿನಾಂಕ ಅಕ್ಟೋಬರ್ 04 ರಂದು ನಡೆಯಲಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಜಿಲ್ಲಾಡಳಿತವು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಕಲ ಸಿದ್ಧತೆಗಳನ್ನು ಪೂರ್ಣಗೊ
ಬಳ್ಳಾರಿ: ಅಕ್ಟೋಬರ್ 4 ರಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ; ಉಚಿತ ವಸತಿ


ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ದಿನಾಂಕ ಅಕ್ಟೋಬರ್ 04 ರಂದು ನಡೆಯಲಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಜಿಲ್ಲಾಡಳಿತವು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ನಗರದ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಒಟ್ಟು 10,420 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

*ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ:*

ದೂರದ ಊರುಗಳಿಂದ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತವು ಅಕ್ಟೋಬರ್ 03 ರಂದು ವಸತಿ ವ್ಯವಸ್ಥೆಯನ್ನು ಕಲ್ಪಿಸಿದೆ.

ನಗರದ ಸ್ಟೇಡಿಯಂ ರಸ್ತೆಯ ಕೌಲ್ ಬಜಾರ್ ನ ವಾಲ್ಮೀಕಿ ಭವನ. ನೋಡಲ್ ಅಧಿಕಾರಿ -ಶಾಷು (ಮೊ: 9972451535).

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ: ವಿಜ್ಞಾನ ಕೇಂದ್ರದ ಹಿಂಭಾಗ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ನಲ್ಲಚೆರವು, ಕೌಲ್ ಬಜಾರ್. ನೋಡಲ್ ಅಧಿಕಾರಿ- ನಾಗೇಶ್ (ಮೊ: 9986696487).

*ಪರೀಕ್ಷಾರ್ಥಿಗಳಿಗೆ ಸೂಚನೆಗಳು:*

ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಸಮಯಕ್ಕಿಂತ ಕನಿಷ್ಠ 2 ಗಂಟೆಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪ್ರವೇಶ ಪತ್ರ ಹಾಗೂ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್ / ಮತದಾರರ ಗುರುತಿನ ಚೀಟಿ) ತರುವುದು ಕಡ್ಡಾಯ.

*ಪೊಲೀಸ್ ಇಲಾಖೆಯ ಬಿಗಿ ಕ್ರಮಗಳು:*

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಪರೀಕ್ಷೆಗೆ ಸಂಬ0ಧಿಸಿದ0ತೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವವರ ಮೇಲೆ ನಿಗಾ ಇಡಲು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಬಿಗಿ ಭದ್ರತೆ ಮತ್ತು ಸಿಸಿಟಿವಿ ನಿಗಾ: ಖಜಾನೆಯಿಂದ ಪ್ರಶ್ನೆಪತ್ರಿಕೆ ವಿತರಿಸುವ ಸ್ಥಳಗಳಲ್ಲಿ 24/7 ಸಿಸಿಟಿವಿ ಕಣ್ಗಾವಲು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಒಬ್ಬ ವೀಕ್ಷಕರನ್ನು ನಿಯೋಜಿಸಲಾಗಿದೆ.

ಸಾರಿಗೆ ಹಾಗೂ ಮೂಲಸೌಕರ್ಯ: ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಕೆ.ಕೆ.ಆರ್.ಟಿ.ಸಿ ವತಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಜೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಸರಬರಾಜು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಗಾಳಿ-ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರತಿಯೊಂದು ಕೇಂದ್ರಕ್ಕೂ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿ, ಥರ್ಮಲ್ ಸ್ಕಾನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ kea.kar.nic.in ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande