ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಮುಂದಿನ 7 ದಿನ ಗುಡುಗು-ಮಿಂಚಿನ ಎಚ್ಚರಿಕೆ
ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲೂ ಸಂಜೆ ಮತ್ತು ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಯಿದೆ.
karnataka-rain-alert-heavy-rain-thunderstorm-next-7-days


ಬೆಂಗಳೂರು, 20 ಅಕ್ಟೋಬರ್ (ಹಿ.ಸ.):

ಕರ್ನಾಟಕದಲ್ಲಿ ಹಿಂಗಾರು ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ), ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಕ್ಟೋಬರ್ 20ರಿಂದ 24ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಬಹುದು ಎಂದು ಮುನ್ಸೂಚನೆ ತಿಳಿಸಿದೆ.

ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಅಕ್ಟೋಬರ್ 20ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಅಕ್ಟೋಬರ್ 21ರಂದು ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಅಕ್ಟೋಬರ್ 22 ಮತ್ತು 23ರಂದು ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳು ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಅಕ್ಟೋಬರ್ 24ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 25 ಮತ್ತು 26ರಂದು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ನಗರದ ವಿವಿಧೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆಯ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕಿದೆ.

ಸಿಡಿಲಿನ ಬಗ್ಗೆ ಎಚ್ಚರಿಕೆ

ಗುಡುಗು-ಮಿಂಚು ಮತ್ತು ಸಿಡಿಲಿನ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹಾಗೂ ತೆರೆದ ಪ್ರದೇಶಗಳಲ್ಲಿ ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೈತರು ಜಮೀನುಗಳಲ್ಲಿ ಕೆಲಸ ಮಾಡುವಾಗ ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ ಎಚ್ಚರಿಸಲಾಗಿದೆ.

ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತು ತೀವ್ರತೆಯಲ್ಲಿ ಜಿಲ್ಲಾವಾರು ವ್ಯತ್ಯಾಸವಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆ ಹಾಗೂ ಎಚ್ಚರಿಕೆಗಳನ್ನು ಗಮನಿಸುವುದು ಅಗತ್ಯವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande