ಕೋಲಾರ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ: ಅ. 21 ರಿಂದ 23ರವರೆಗೆ ನಿಷೇಧಾಜ್ಞೆ ಜಾರಿ.
ಕೋಲಾರ,21 ಅಕ್ಟೊಬರ್ (ಹಿ. ಸ.) ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯು ದಿನಾಂಕ 23/10/2026 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುನ್ನ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೋಲಾರ ಜಿಲ್ಲೆಯಾದ್ಯಂತ ಭ
ಕೋಲಾರ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ: ಅ. 21 ರಿಂದ 23ರವರೆಗೆ ನಿಷೇಧಾಜ್ಞೆ ಜಾರಿ.


ಕೋಲಾರ,21 ಅಕ್ಟೊಬರ್ (ಹಿ. ಸ.)

ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯು ದಿನಾಂಕ 23/10/2026 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುನ್ನ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೋಲಾರ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ (ನಿಷೇಧಾಜ್ಞೆ) ವಿಧಿಸಿ ಕೋಲಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಆರ್. ರವಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆಯು ದಿನಾಂಕ 21/10/2026 ರ ಸಂಜೆ 4:00 ಗಂಟೆಯಿಂದ ದಿನಾಂಕ 23/10/2026 ರ ರಾತ್ರಿ 10:00 ಗಂಟೆಯವರೆಗೆ ಕೋಲಾರ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಕೋಲಾರ ಜಿಲ್ಲೆಯ 6 ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ರಸ್ತೆ, ಬೀದಿ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರಗಳ ಸುತ್ತಮುತ್ತ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಚುನಾವಣಾ ಅಭ್ಯರ್ಥಿಗಳು ಅಥವಾ ಬೆಂಬಲಿಗರು ಗುಂಪು ಸೇರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಅಕ್ಟೋಬರ್ 21ರ ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ತದನಂತರ ಜಿಲ್ಲೆಯ ಮತದಾರರಲ್ಲದ ಹೊರಗಿನ ವ್ಯಕ್ತಿಗಳು ಜಿಲ್ಲೆಯ ವ್ಯಾಪ್ತಿಯಿಂದ ಕಡ್ಡಾಯವಾಗಿ ಹೊರಹೋಗತಕ್ಕದ್ದು. ಇದನ್ನು ಖಚಿತಪಡಿಸಿಕೊಳ್ಳಲು ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್ಗಳು ಮತ್ತು ಅತಿಥಿ ಗೃಹಗಳಲ್ಲಿ ತಂಗಿರುವವರ ಪಟ್ಟಿಯನ್ನು ಪರಿಶೀಲಿಸಿ ಹೊರಗಿನವರನ್ನು ಕಳುಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಚುನಾವಣಾ ಅವಧಿಯಲ್ಲಿ ಯಾವುದೇ ಮಾರಕಾಸ್ತ್ರಗಳಾದ ಕುಡುಗೋಲು, ಖಡ್ಗ, ಭರ್ಚಿ, ಚೂರಿ, ಲಾಠಿ ಅಥವಾ ಇನ್ಯಾವುದೇ ಆಯುಧಗಳನ್ನು ಹೊಂದುವುದು ಹಾಗೂ ಸಾಗಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ. ಕಲ್ಲುಗಳು, ಸ್ಫೋಟಕ ಅಥವಾ ದಾಹಕ ವಸ್ತುಗಳನ್ನು ತರುವುದು ಅಥವಾ ಶೇಖರಿಸುವುದನ್ನು ಸಹ ನಿಷೇಧಿಸಲಾಗಿದೆ. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ ಹಾಗೂ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಮಾಡುವ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಭದ್ರತೆ ಹಾಗೂ ಶಾಂತಿಗೆ ಭಂಗ ತರುವಂತಹ ಕೂಗು ಉಚ್ಚರಿಸುವುದು, ಹಾಡುವುದು, ಭಿತ್ತಿಪತ್ರ ಅಂಟಿಸುವುದು ಹಾಗೂ ಜಾತಿ-ಧರ್ಮಗಳ ನಡುವೆ ಕೋಮು ಭಾವನೆ ಕೆರಳಿಸುವ ಯಾವುದೇ ಚಟುವಟಿಕೆಗಳನ್ನು ಮಾಡುವಂತಿಲ್ಲ. ಅಲ್ಲದೆ, ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ, ಜನಸಮೂಹ ಸೇರುವಿಕೆ ಹಾಗೂ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮತದಾನದ ದಿನದಂದು ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಚುನಾವಣಾ ಪ್ರಚಾರ, ಪೋಸ್ಟರ್, ಬ್ಯಾನರ್ ಬಳಕೆಯನ್ನು ನಿರ್ಬಂಧಿಸಲಾಗಿದೆ. ಅದೇ ರೀತಿ, ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್ ಮತ್ತು ಸೈಬರ್ ಕೆಫೆಗಳನ್ನು ಸಹ ನಿರ್ಬಂಧಿಸಲಾಗಿದೆ. ಜೊತೆಗೆ, ಮತದಾನದ ಗೌಪ್ಯತೆಗೆ ಧಕ್ಕೆ ತರುವಂತಹ ಯಾವುದೇ ಛಾಯಾಚಿತ್ರಗಳನ್ನು ತೆಗೆಯದಂತೆ ಪತ್ರಿಕಾ ಮತ್ತು ಮಾಧ್ಯಮದವರಿಗೂ ನಿರ್ಬಂಧ ವಿಧಿಸಲಾಗಿದೆ.

ಈ ನಿಷೇಧಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಶವ ಸಂಸ್ಕಾರದಂತಹ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಹಾಗೆಯೇ, ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು, ಭದ್ರತೆಗಾಗಿ ಶಸ್ತ್ರಾಸ್ತ್ರ ಹಿಡಿದಿರುವ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸುವ ಮತದಾರರಿಗೆ ಇದು ಅನ್ವಯಿಸುವುದಿಲ್ಲ. ಇದಲ್ಲದೆ, ಅಭ್ಯರ್ಥಿಗಳು ಮನೆಮನೆಗೆ ಭೇಟಿ ನೀಡಿ (ಬಾಗಿಲಿನಿಂದ ಬಾಗಿಲಿಗೆ) ಮತಯಾಚನೆ ಮಾಡುವುದಕ್ಕೂ ಈ ಆದೇಶ ಅಡ್ಡಿಯಾಗುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande