
ಬೆಂಗಳೂರು, 22 ಅಕ್ಟೋಬರ್ (ಹಿ.ಸ.):
ಬರದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (ಎನ್ಡಿಆರ್ಎಫ್) ಅಡಿಯಲ್ಲಿ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ.
2026ರ ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಶೇ.35ರಷ್ಟು ಮಳೆ ಕೊರತೆಯಾಗಿದೆ. ವಾಡಿಕೆಯಂತೆ 852 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 551 ಮಿ.ಮೀ. ಮಳೆಯಾಗಿದೆ.
ಇದು 1956ರ ನಂತರದ ಎರಡನೇ ಅತ್ಯಂತ ಕಡಿಮೆ ಹಾಗೂ 1901ರಿಂದ ದಾಖಲಾದ ಏಳನೇ ಅತ್ಯಂತ ಕಡಿಮೆ ಮುಂಗಾರು ಮಳೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರವು 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಒಟ್ಟು 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 53.92 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 4.01 ಲಕ್ಷ ಹೆಕ್ಟೇರ್ ತೋಟಗಾರಿಕಾ ಬೆಳೆಗಳು ನಷ್ಟಕ್ಕೊಳಗಾಗಿವೆ. ಕೃಷಿ ವೆಚ್ಚದ ಆಧಾರದ ಮೇಲೆ ಅಂದಾಜಿಸಿರುವ ಒಟ್ಟು ಆರ್ಥಿಕ ನಷ್ಟ ₹62,481.88 ಕೋಟಿಯಾಗಿದೆ ಎಂದು ತಿಳಿಸಲಾಗಿದೆ.
ವಿವಿಧ ಉದ್ದೇಶಗಳಿಗೆ ₹20,585 ಕೋಟಿ ನೆರವಿನ ಬೇಡಿಕೆ
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಸಮಗ್ರ ಮನವಿ ಪತ್ರದಲ್ಲಿ ಬೆಳೆ ಹಾನಿಯ ಪರಿಹಾರ ಸಹಾಯಧನಕ್ಕೆ ₹6,128.70 ಕೋಟಿ, 61.91 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಜೀವನೋಪಾಯ ಪರಿಹಾರಕ್ಕೆ ₹12,146.99 ಕೋಟಿ, ಕುಡಿಯುವ ನೀರಿನ ಪೂರೈಕೆಗೆ ₹1,727 ಕೋಟಿ ಹಾಗೂ ಪಶುಸಂಗೋಪನೆ ಮತ್ತು ಜಾನುವಾರುಗಳ ಸಂರಕ್ಷಣೆಗೆ ₹583.04 ಕೋಟಿ ನೆರವು ಕೋರಲಾಗಿದೆ.
ಬರದಿಂದ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ತಕ್ಷಣ ಆರ್ಥಿಕ ನೆರವು ಒದಗಿಸಬೇಕಿದೆ. ರೈತರಿಗೆ ದಿನಕ್ಕೆ ₹327ರಂತೆ 60 ದಿನಗಳ ಅವಧಿಗೆ ಜೀವನೋಪಾಯ ಪರಿಹಾರವನ್ನು ಲೆಕ್ಕಹಾಕಲಾಗಿದೆ.
ಜಾನುವಾರುಗಳ ರಕ್ಷಣೆಗಾಗಿ 476 ಗೋಶಾಲೆಗಳು ಮತ್ತು 583 ಮೇವು ಬ್ಯಾಂಕ್ಗಳನ್ನು ಸ್ಥಾಪಿಸಲು ಕೇಂದ್ರದ ನೆರವು ಅಗತ್ಯವಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಹಳೆಯ ಕೃಷಿ ಗಣತಿ ದತ್ತಾಂಶದಿಂದ ಪರಿಹಾರ ಕೊರತೆ
ಬೆಳೆ ಹಾನಿಯ ಪರಿಹಾರ ಸಹಾಯಧನ ನಿರ್ಧರಿಸಲು 2015–16ರ ಕೃಷಿ ಗಣತಿಯ ಹಳೆಯ ದತ್ತಾಂಶವನ್ನು ಆಧರಿಸುತ್ತಿರುವುದರಿಂದ ರಾಜ್ಯಕ್ಕೆ ಸುಮಾರು ₹1,669.50 ಕೋಟಿ ನೆರವಿನ ಕೊರತೆಯಾಗುವ ಸಾಧ್ಯತೆಯಿದೆ.
ಹೀಗಾಗಿ, ಫಲಾನುಭವಿ ರೈತರನ್ನು ನಿಖರವಾಗಿ ಗುರುತಿಸಲು ಮತ್ತು ಪರಿಹಾರದ ಅಗತ್ಯವನ್ನು ಸಮರ್ಪಕವಾಗಿ ಅಂದಾಜಿಸಲು ಕರ್ನಾಟಕ ಸರ್ಕಾರದ ನವೀಕೃತ ‘ಫ್ರೂಟ್ಸ್’ (FRUITS) ದತ್ತಾಂಶವನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.
ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ 16ನೇ ಹಣಕಾಸು ಆಯೋಗದ ಅವಧಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ಜಾರಿಯಲ್ಲಿರುವ ಬೆಳೆ ಹಾನಿ ಪರಿಹಾರ ಸಹಾಯಧನದ ಮಾನದಂಡಗಳನ್ನು ಪರಿಷ್ಕರಿಸುವ ಅಗತ್ಯವನ್ನೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.
ಮಕ್ಕಳ ಪೌಷ್ಟಿಕ ಆಹಾರಕ್ಕೂ ಹೆಚ್ಚುವರಿ ನೆರವು
ಬರಪೀಡಿತ ತಾಲೂಕುಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಅವಧಿಯಲ್ಲಿಯೂ ಪೌಷ್ಟಿಕ ಆಹಾರ ಒದಗಿಸಲು ಪಿಎಂ ಪೋಷಣ್ (PM POSHAN) ಯೋಜನೆಯಡಿ ಹೆಚ್ಚುವರಿಯಾಗಿ ₹427.20 ಕೋಟಿ ನೆರವು ಕೋರಲಾಗಿದೆ.
ದುರ್ಬಲ ವರ್ಗದ ಫಲಾನುಭವಿಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದಡಿ ₹70.96 ಕೋಟಿ ಬಿಡುಗಡೆ ಮಾಡುವಂತೆಯೂ ಮನವಿ ಮಾಡಲಾಗಿದೆ.
ಕೇಂದ್ರದ ಅಂತರ ಸಚಿವಾಲಯ ಅಧ್ಯಯನ ತಂಡವು (IMCT) ಅಕ್ಟೋಬರ್ 3ರಿಂದ 6ರವರೆಗೆ ಕರ್ನಾಟಕಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದೆ.
ಈ ತಂಡದ ಶಿಫಾರಸುಗಳನ್ನು ಉನ್ನತ ಮಟ್ಟದ ಸಮಿತಿಗೆ ಶೀಘ್ರ ಸಲ್ಲಿಸಿ, ರಾಜ್ಯ ಸರ್ಕಾರದ ಸಮಗ್ರ ಬರ ಪರಿಹಾರ ಮನವಿಯ ಪರಿಶೀಲನೆಯನ್ನು ತ್ವರಿತಗೊಳಿಸುವಂತೆ ಕೋರಲಾಗಿದೆ.
ಅಗತ್ಯ ಆರ್ಥಿಕ ನೆರವನ್ನು ವಿಳಂಬವಿಲ್ಲದೆ ಮಂಜೂರು ಮಾಡಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ರೈತರ ಹಿತಾಸಕ್ತಿಗೆ ಕೇಂದ್ರ–ರಾಜ್ಯ ಸಮನ್ವಯ ಅಗತ್ಯ
“ರೈತರ ಕಲ್ಯಾಣದ ವಿಚಾರವು ರಾಜಕೀಯ ಮತ್ತು ಆಡಳಿತಾತ್ಮಕ ಗಡಿಗಳನ್ನು ಮೀರಿದ ಮಹತ್ವವನ್ನು ಹೊಂದಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಆಶಯದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ.
ದೇಶ ಸದೃಢವಾಗಿರಬೇಕಾದರೆ ಅನ್ನದಾತರಾದ ರೈತರ ಶಕ್ತಿಯೇ ಬಹುಮುಖ್ಯ ಆಧಾರ. ಕೃಷಿ ಆಧಾರಿತ ಜೀವನೋಪಾಯವನ್ನು ರಕ್ಷಿಸಲು ಹಾಗೂ ಬರ ಸಂಕಷ್ಟದಿಂದ ರೈತರನ್ನು ಕಾಪಾಡಲು ಸಕಾಲದಲ್ಲಿ ಆರ್ಥಿಕ ನೆರವು ಒದಗಿಸುವುದು ಅತ್ಯಂತ ಅಗತ್ಯವಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R