ಮೈಸೂರು ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ನಿರ್ಬಂಧ: ವಿಚಾರಣೆಗೆ ಸಿಎಂ ಆದೇಶ
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ
mysuru-nandidhwaja-puja-ministers-denied-entry-cm-orders-probe


ಬೆಂಗಳೂರು, 22 ಅಕ್ಟೋಬರ್ (ಹಿ.ಸ.)

ಮೈಸೂರು ಅರಮನೆ ಆವರಣದಲ್ಲಿ ನಡೆದ ನಂದಿಧ್ವಜ ಪೂಜೆಯ ಸಂದರ್ಭದಲ್ಲಿ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ ಹಾಗೂ ಬಸವಂತಪ್ಪ ಅವರಿಗೆ ಪೂಜಾ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ಸಚಿವರನ್ನೇ ನಿರ್ಬಂಧಿಸುವ ಮೂಲಕ ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿರುವುದು ಕಂಡುಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತಕ್ಷಣ ಖುದ್ದಾಗಿ ನಾನೇ ಮಧ್ಯಪ್ರವೇಶಿಸಿ ಸಚಿವರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇನೆ. ಆದರೂ ಅಧಿಕಾರಿಗಳ ಉಡಾಫೆಯನ್ನು ಸಹಿಸಲು ಸಾಧ್ಯವಿಲ್ಲ. ಈ ಘಟನೆಗೆ ಹೊಣೆಗಾರರು ಯಾರು ಎಂಬುದರ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ವಿಚಾರಣಾ ವರದಿ ಬಂದ ಬಳಿಕ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande