ಶಿಕ್ಷಕರ, ಪದವೀಧರ ಕ್ಷೇತ್ರಗಳ ಚುನಾವಣೆ: ಬೆಂಗಳೂರಿನ 11 ವಿಭಾಗಗಳಲ್ಲಿ ಮದ್ಯ ಮಾರಾಟ ನಿಷೇಧ
ಮತದಾನ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರಿಂದ ಆದೇಶ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ
Bengaluru-liquor-sale-ban-teachers-graduates-constituency-elections


ಬೆಂಗಳೂರು, 23 ಅಕ್ಟೋಬರ್ (ಹಿ.ಸ.):

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದಂತೆ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ 11 ವಿಭಾಗಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ಆಗ್ನೇಯ, ನೈಋತ್ಯ, ವಾಯವ್ಯ, ವೈಟ್ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳ ವ್ಯಾಪ್ತಿಯಲ್ಲಿ ಈ ನಿಷೇಧ ಜಾರಿಯಲ್ಲಿರಲಿದೆ.

ವೈನ್ಶಾಪ್ಗಳು, ಮದ್ಯದಂಗಡಿಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಹಾಗೂ ಟಾವರ್ನ್ಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಮತ ಎಣಿಕೆ ದಿನವೂ ನಿಷೇಧ

ಅಕ್ಟೋಬರ್ 27ರಂದು ನಡೆಯಲಿರುವ ಮತ ಎಣಿಕೆಯ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11.59ರವರೆಗೆ ನಿಷೇಧ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ನಿಷೇಧಿತ ಅವಧಿಯಲ್ಲಿ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ ಮಾಡುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಚುನಾವಣಾ ಪ್ರಕ್ರಿಯೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಹಾಗೂ ಮದ್ಯ ಮಾರಾಟದ ಉದ್ದಿಮೆದಾರರು ಪೊಲೀಸ್ ಇಲಾಖೆಯ ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande