
ಗದಗ, 23 ಅಕ್ಟೋಬರ್ (ಹಿ.ಸ.) ರಾಷ್ಟ್ರೀಯ ಹೆದ್ದಾರಿ 67ರ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಸಮೀಪ ಹೆದ್ದಾರಿ ಅಂಚಿನಲ್ಲಿ ಅನಧಿಕೃತವಾಗಿ ನಿರ್ಮಿಸಿ ನಡೆಸುತ್ತಿದ್ದ ಅಂಗಡಿಗಳನ್ನು ಅಧಿಕಾರಿಗಳು ಜೆಸಿಬಿ ಮೂಲಕ ತೆರವುಗೊಳಿಸಿದರು.
ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಪ್ರದೇಶದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದವು ಎನ್ನಲಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದ್ದರೂ, ಅದನ್ನು ನಿರ್ಲಕ್ಷಿಸಿದ್ದ ಹಿನ್ನೆಲೆಯಲ್ಲಿ ಹೆದ್ದಾರಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೆರವು ಕಾರ್ಯಾಚರಣೆ ನಡೆಸಿದರು.
ಅಪಘಾತಗಳಿಗೆ ಕಾರಣವಾಗುತ್ತಿದ್ದ ಅಂಗಡಿಗಳು?
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದ ಅಂಗಡಿಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಅಪಘಾತಗಳ ಅಪಾಯ ಹೆಚ್ಚಾಗಿತ್ತು ಎಂಬ ಆತಂಕ ಸ್ಥಳೀಯರಲ್ಲಿ ಮನೆಮಾಡಿತ್ತು. ಈ ಪ್ರದೇಶದಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಈವರೆಗೆ 14 ಜನರು ಮೃತಪಟ್ಟಿದ್ದಾರೆ ಎಂದು ರಮೇಶ ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರಲ್ಲಿ ಸಂತಸ
ಬಿಂಕದಟ್ಟಿ ಹಾಗೂ ಅಸುಂಡಿ ಗ್ರಾಮಗಳ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ. ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಹಾಗೂ ಅಪಘಾತಗಳ ಅಪಾಯ ತಗ್ಗಿಸುವ ಉದ್ದೇಶದಿಂದ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP