
ಬೆಂಗಳೂರು, 23 ಅಕ್ಟೋಬರ್ (ಹಿ.ಸ.):
ಮಾಂಜಾ ದಾರದಿಂದ ಅಮಾಯಕರ ಜೀವಹಾನಿಯಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಪಾಯಕಾರಿ ಮಾಂಜಾ ದಾರದ ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜತೆಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಹುಬ್ಬಳ್ಳಿಯ ವಿದ್ಯಾ ಮಂಜುನಾಥ ಗೌಡರ್ ಅವರ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಅಮಾಯಕ ಜೀವವೊಂದು ಬಲಿಯಾಗಿರುವುದು ತೀವ್ರ ನೋವು ಮತ್ತು ಕಳವಳವನ್ನುಂಟು ಮಾಡಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಅಪಾಯಕಾರಿ ಮಾಂಜಾ ದಾರದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ ಇಂತಹ ದಾರಗಳ ಮಾರಾಟ ಮತ್ತು ಬಳಕೆ ಮುಂದುವರಿಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಪ್ರಸ್ತುತ ಕಾನೂನಿನ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜತೆಗೆ, ಅಗತ್ಯವಿದ್ದಲ್ಲಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೆಲವರ ಕ್ಷಣಿಕ ಮನೋರಂಜನೆ ಅಥವಾ ಮೋಜಿಗಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ. ಗಾಳಿಪಟ ಹಾರಿಸುವ ಹವ್ಯಾಸ ಮತ್ತೊಬ್ಬರ ಬದುಕನ್ನೇ ಕಸಿದುಕೊಳ್ಳುವ ಅಪಾಯಕಾರಿ ಚಟುವಟಿಕೆಯಾಗಿ ಪರಿಣಮಿಸುವುದನ್ನು ತಡೆಯಬೇಕಿದೆ ಎಂದು ಅವರು ಒತ್ತಿಹೇಳಿದ್ದಾರೆ.
ಇದು ಕೇವಲ ಕಾನೂನು ಮತ್ತು ನಿಯಮಗಳ ಪ್ರಶ್ನೆಯಲ್ಲ. ಸಮಾಜದ ಮಾನವೀಯತೆ ಹಾಗೂ ನೈತಿಕ ಹೊಣೆಗಾರಿಕೆಯ ಪ್ರಶ್ನೆಯೂ ಆಗಿದೆ. ಕಳೆದ ಕೆಲವು ವರ್ಷಗಳಿಂದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಮರುಕಳಿಸುತ್ತಿದ್ದರೂ, ಅದರ ಅಪಾಯವನ್ನು ಅರಿತುಕೊಂಡೇ ಇಂತಹ ದಾರಗಳನ್ನು ಬಳಸುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ತಮ್ಮ ಮೋಜಿನಿಂದ ಮತ್ತೊಬ್ಬರ ಜೀವಕ್ಕೆ ಅಪಾಯ ಉಂಟಾಗಬಹುದು ಎಂಬ ಅರಿವಿದ್ದೂ ಇಂತಹ ಕೃತ್ಯಗಳನ್ನು ಮುಂದುವರಿಸುವುದು ಕೇವಲ ನಿರ್ಲಕ್ಷ್ಯವಲ್ಲ, ಅಪರಾಧ ಕೃತ್ಯವಾಗುತ್ತದೆ. ಇದರಿಂದ ಜೀವಹಾನಿ ಸಂಭವಿಸಿದರೆ ಅದಕ್ಕೆ ಕಾರಣರಾದವರು ಕಾನೂನಿನ ಪ್ರಕಾರ ಹೊಣೆಗಾರರಾಗಬೇಕಾಗುತ್ತದೆ. ಉದ್ದೇಶಪೂರ್ವಕವಾಗಿ ಅಪಾಯ ಸೃಷ್ಟಿಸುವ ಅಥವಾ ಇತರರ ಸುರಕ್ಷತೆಯನ್ನು ಕಡೆಗಣಿಸುವ ಪ್ರವೃತ್ತಿಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಗಾಳಿಪಟ ಹಾರಿಸುವುದು ಮನೋರಂಜನೆಯಾಗಿರಬೇಕೇ ಹೊರತು ಮತ್ತೊಬ್ಬರ ಜೀವಕ್ಕೆ ಅಪಾಯ ತಂದೊಡ್ಡುವ ಸ್ಪರ್ಧೆಯಾಗಬಾರದು. ಮನೋರಂಜನೆಯ ಹೆಸರಿನಲ್ಲಿ ಅಪಾಯಕಾರಿ ಮಾಂಜಾ ದಾರ ಬಳಸುವುದಾಗಲಿ, ಗಾಳಿಪಟ ಹಾರಿಸುವುದನ್ನು ಜೂಜಾಟ ಅಥವಾ ಅಪಾಯಕಾರಿ ಸ್ಪರ್ಧೆಯಾಗಿ ಪರಿವರ್ತಿಸುವುದಾಗಲಿ ಒಪ್ಪಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾದರೆ ತಪ್ಪಿತಸ್ಥರು ಕಾನೂನು ಕ್ರಮ ಎದುರಿಸಲು ಸಿದ್ಧರಾಗಬೇಕು ಎಂದು ಎಚ್ಚರಿಸಿದ್ದಾರೆ.
ಮನುಷ್ಯನ ಜೀವಕ್ಕಿಂತ ದೊಡ್ಡ ಮನೋರಂಜನೆ ಯಾವುದೂ ಇಲ್ಲ. ಕೆಲವರ ಮೋಜಿಗಾಗಿ ಅಮಾಯಕರ ಜೀವ ಬಲಿಯಾಗುವುದನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ. ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ, ಅಪಾಯಕಾರಿ ಮಾಂಜಾ ದಾರದ ಬಳಕೆಗೆ ಪರಿಣಾಮಕಾರಿ ಕಡಿವಾಣ ಹಾಕಲು ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.