
ಹುಬ್ಬಳ್ಳಿ, 23 ಅಕ್ಟೋಬರ್ (ಹಿ.ಸ.):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ, ಅವರಂತಹ ಹಿರಿಯ ನಾಯಕನಿಗೆ ಪೆನ್‌ಡ್ರೈವ್ ತೋರಿಸಿ ಬೆದರಿಸುವ ರಾಜಕೀಯ ಬೆಳವಣಿಗೆ ಖಂಡನೀಯ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಫಾತಿಮಾ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಮನೋಭಾವ ಕಾಂಗ್ರೆಸ್‌ನಲ್ಲಿ ಕಂಡುಬರುತ್ತಿದೆ. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ನಡೆದಿರುವ ಬೆಳವಣಿಗೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಬಹಿರಂಗಪಡಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲವಿದ್ದರೂ ರೈತರಿಗೆ ಪರಿಹಾರದ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ 13 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಆದರೆ, ಈಗ ಕನಿಷ್ಠ 2,500 ರೂ. ನೀಡಲೂ ಹಣವಿಲ್ಲ ಎಂದು ಸರ್ಕಾರ ಹೇಳುತ್ತಿದೆ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ ಎಂದು ಆರೋಪಿಸಿದರು.
ಕಬ್ಬು ಬೆಳೆಗಾರರ ಸಭೆಗೆ ಗೈರು
ಕಬ್ಬು ಬೆಳೆಗಾರ ರೈತರ ಬೇಡಿಕೆಗಳ ಕುರಿತು ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಭೆ ನಿಗದಿಪಡಿಸಿದ್ದಾರೆ. ಸಂಸದೀಯ ಸಭೆ ಹಾಗೂ ಪೂರ್ವನಿಗದಿತ ಕಾರ್ಯಕ್ರಮಗಳು ಇರುವುದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗೆ ತಿಳಿಸಿದ್ದೇನೆ. ರೈತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಜೋಶಿ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.