
ಬೆಂಗಳೂರು, 24 ಅಕ್ಟೋಬರ್ (ಹಿ.ಸ.):
ರಾಜ್ಯದ ಐಟಿ ಕಂಪನಿಗಳಲ್ಲಿ ಕನ್ನಡ ಭಾಷೆ ಮಾತನಾಡುವ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡ ಭಾಷೆ ತಿಳಿದಿರುವ ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಸರ್ಕಾರ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಮನವಿ ಮಾಡಿದ್ದಾರೆ.
ರೆಸ್ಯೂಮ್ನಲ್ಲಿ ಕನ್ನಡ ಉಲ್ಲೇಖಿಸಿದರೆ ಅವಕಾಶ ನಿರಾಕರಣೆ?
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಮಾತನಾಡಿರುವ ಯುವತಿ, ಐಟಿ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ರೆಸ್ಯೂಮ್ನಲ್ಲಿ ಕನ್ನಡವನ್ನು ಮಾತೃಭಾಷೆ ಎಂದು ನಮೂದಿಸುವುದು ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕನ್ನಡ ಭಾಷೆ ತಿಳಿದಿರುವುದಾಗಿ ಉಲ್ಲೇಖಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಹಂತದಲ್ಲಿಯೇ ತಿರಸ್ಕರಿಸಲಾಗುತ್ತಿದೆ ಎಂಬುದು ಅವರ ದೂರಾಗಿದೆ.
ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳನ್ನು ಬೆಂಗಳೂರಿನ ಬದಲಿಗೆ ಇತರ ರಾಜ್ಯಗಳಲ್ಲಿ ನಡೆಸಲಾಗುತ್ತಿದೆ. ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿವೆ ಎಂದು ಯುವತಿ ವಿಡಿಯೋದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೆರೆಯ ರಾಜ್ಯಗಳ ಅಭ್ಯರ್ಥಿಗಳಿಗೆ ಆದ್ಯತೆ ಆರೋಪ
ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಅಭ್ಯರ್ಥಿಗಳಿಗೆ ಕಡಿಮೆ ಸಂಬಳದಲ್ಲಿ ಉದ್ಯೋಗ ನೀಡಲಾಗುತ್ತಿದೆ. ರೆಸ್ಯೂಮ್ನಲ್ಲಿ ತೆಲುಗು ಅಥವಾ ತಮಿಳು ಮಾತೃಭಾಷೆ ಎಂದು ನಮೂದಿಸಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಯುವತಿ ಆರೋಪಿಸಿದ್ದಾರೆ.
ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಕಂಪನಿಗಳ ಹೆಸರು ಅಥವಾ ಸ್ವತಂತ್ರವಾಗಿ ದೃಢಪಡಿಸುವ ದಾಖಲೆಗಳು ವಿಡಿಯೋದಲ್ಲಿ ಬಹಿರಂಗವಾಗಿಲ್ಲ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಮನವಿ
ಐಟಿ ಕಂಪನಿಗಳಲ್ಲಿ ಇಂತಹ ತಾರತಮ್ಯ ಮುಂದುವರಿದರೆ ರಾಜ್ಯದ ಸ್ಥಳೀಯ ಯುವಕರು ಉದ್ಯೋಗ ಕಳೆದುಕೊಳ್ಳುವ ಹಾಗೂ ನಿರುದ್ಯೋಗಿಗಳಾಗುವ ಆತಂಕವಿದೆ ಎಂದು ಯುವತಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಯುವತಿಯ ವಿಡಿಯೋವನ್ನು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ಘಟನೆಗಳು ಬಹಳ ಹಿಂದಿನಿಂದಲೂ ನಡೆಯುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಬೆಂಗಳೂರಿನ ಹೊರಗೆ ಕ್ಯಾಂಪಸ್ ನೇಮಕಾತಿ ನಡೆಸಿ, ಇತರ ರಾಜ್ಯಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ತರಬೇತಿ ನೀಡಲಾಗುತ್ತಿದೆ.
ಇದರಿಂದ ರಾಜ್ಯದ ವಿದ್ಯಾವಂತ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಅವರ ವಾದವಾಗಿದೆ.
ಖಾಸಗಿ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಕೂಡ ಅನುಮತಿ ಪಡೆಯಲು ಪರದಾಡುವ ಪರಿಸ್ಥಿತಿ ಇದೆ ಎಂದು ರೂಪೇಶ್ ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೊರರಾಜ್ಯದ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಸಿಗುತ್ತಿದ್ದರೆ, ಸ್ಥಳೀಯ ಕನ್ನಡಿಗರು ಕೆಲಸದ ಸ್ಥಳದಲ್ಲಿ ಕಿರುಕುಳ ಎದುರಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇಂತಹ ಬೆಳವಣಿಗೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R