ಎಸ್ಐಆರ್ ವಿರುದ್ಧ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ವಿಜಯಪುರ, 24 ಅಕ್ಟೋಬರ್ (ಹಿ.ಸ.) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗ
Sir ಪ್ರತಿಭಟನೆ


ವಿಜಯಪುರ, 24 ಅಕ್ಟೋಬರ್ (ಹಿ.ಸ.)

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗುತ್ತಾ ಅಂಬೇಡ್ಕರ್ ವೃತ್ತದವರೆಗೆ ತಲುಪಿತು.

‘ಪ್ರಜಾಪ್ರಭುತ್ವ ಉಳಿಸಿ’ ಆಂದೋಲನದ ಅಂಗವಾಗಿ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಎಸ್ಐಆರ್ ಪ್ರಕ್ರಿಯೆ ಕುರಿತು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ ಹಾಗೂ ಸಮರ್ಪಕ ಪರಿಶೀಲನೆ ಇರಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರ ರಾಜಶೇಖರ ಹಾದಿಮನಿ, ಎಸ್ಐಆರ್ ಪ್ರಕ್ರಿಯೆಯ ಕುರಿತು ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಹಾಗೂ ಆಕ್ಷೇಪಗಳಿವೆ ಎಂದು ಹೇಳಿದರು. ಪ್ರಕ್ರಿಯೆಯ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಹಾಗೂ ಸಾರ್ವಜನಿಕರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆಯೂ ಕೇಳಿಬಂತು. ಅಲ್ಲದೆ, ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೆರವಣಿಗೆಯ ವೇಳೆ ಪ್ರತಿಭಟನಾಕಾರರು ಎಸ್ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಕಾಪಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಆಕ್ಷೇಪ ಅಥವಾ ಬದಲಾವಣೆಗಳಿದ್ದಲ್ಲಿ ಸಂಬಂಧಪಟ್ಟ ಮತದಾರರಿಗೆ ಸಮರ್ಪಕ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande