
ಬಳ್ಳಾರಿ, 24 ಅಕ್ಟೋಬರ್ (ಹಿ.ಸ.)
ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಪೋಕ್ಸೋ ಕಾಯ್ದೆ-2012 ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 26 ರಿಂದ 31ರವರೆಗೆ ಸುರಕ್ಷಿತ ಬಚಪನ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 27 ರಂದು ಬೆಳಿಗ್ಗೆ 9:30 ಗಂಟೆಗೆ ಕಪ್ಪಗಲ್ ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯಲ್ಲಿ ಜರುಗಲಿದೆ.
ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಂದಿನಿ ಶಿಂಧೆ ಹಾಗೂ ಡ್ರೀಮ್ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ಪರಿಮಳ ಭಾಗವಹಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್