ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ 400 ಎಕರೆ ಭೂಮಿ ಒದಗಿಸಲು ಪರಿಶೀಲನೆ: ಎಂ.ಬಿ. ಪಾಟೀಲ್
ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಸುಮಾರು 400 ಎಕರೆ ಭೂಮಿ ಒದಗಿಸಲು ಪರಿಶೀಲನೆ ನಡೆಸಲಾಗುತ್ತಿದ್ದು, ವಿವಿಧ ಸ್ಥಳಗಳ ಪರಿಶೀಲನೆ ಮುಂದುವರಿದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
karnataka-400-acres-land


ಬೆಂಗಳೂರು, 24 ಅಕ್ಟೋಬರ್ (ಹಿ.ಸ.):

ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗಾಗಿ ಸುಮಾರು 400ರಿಂದ 500 ಎಕರೆ ಭೂಮಿ ಮೀಸಲಿಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ಸ್ಥಾಪಿಸಲು 100 ಎಕರೆ ಭೂಮಿ ಕೋರಿದೆ. ಆದರೆ, ಈ ಯೋಜನೆಯಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುವುದಿಲ್ಲ ಎಂಬ ಕಾರಣಕ್ಕೆ, 400ರಿಂದ 500 ಎಕರೆ ಭೂಮಿ ಮೀಸಲಿಟ್ಟು ವಿವಿಧ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಸಲಹೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಸ್ಥಳಗಳ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಯವರು ಒಂದು ಸ್ಥಳವನ್ನು ಸೂಚಿಸಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ತಮ್ಮೊಂದಿಗೆ ಈ ಕುರಿತು ಮಾತನಾಡಿದ್ದಾರೆ. ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾರೋಹಳ್ಳಿ ಪ್ರದೇಶವನ್ನು ಸೂಚಿಸಿದ್ದರು. ಈ ಸಂಬಂಧ ಪರಿಶೀಲನಾ ವರದಿ ಬಂದಿದ್ದು, ನೆಲಮಂಗಲ ಸೇರಿದಂತೆ ಇನ್ನೂ ಮೂರು ಸ್ಥಳಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದ ಭೂಮಿ ಹಿಂಪಡೆಯುವ ಪ್ರಶ್ನೆ

ಶಿವಮೊಗ್ಗ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಕ್ಕೆ ಸೇರಿದ ಭೂಮಿಯನ್ನು ಸ್ವಾಧೀನದಿಂದ ಕೈಬಿಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ಹಿಂದೆ ಒಟ್ಟು 362 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದರಲ್ಲಿ ಸುಮಾರು ನಾಲ್ಕು ಎಕರೆ ಗ್ರಾಮೀಣ ಪ್ರದೇಶಕ್ಕೆ ಸೇರಿದೆ. ಈ ಭಾಗವನ್ನು ಹೊರತುಪಡಿಸಿ ಉಳಿದ ಯಾವುದೇ ಭೂಮಿಯನ್ನು ಸ್ವಾಧೀನದಿಂದ ಕೈಬಿಡಲು ರಾಜ್ಯ ಸರ್ಕಾರ ಸಿದ್ಧವಿಲ್ಲ. ಭೂಮಿ ಹಿಂಪಡೆಯುವ ವಿಚಾರದಲ್ಲಿ ಮುಖ್ಯಮಂತ್ರಿಯವರು ಸ್ಪಷ್ಟ ನಿಲುವು ಹೊಂದಿದ್ದಾರೆ ಎಂದು ಹೇಳಿದರು.

2027ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ

2027ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ನಡೆಯಲಿದೆ. ಈಗಾಗಲೇ ಜಪಾನ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿ ಅಲ್ಲಿನ ಉದ್ಯಮಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಅಮೆರಿಕ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ, ಆಡಳಿತಾತ್ಮಕ ಕೆಲಸಗಳು ಬಾಕಿ ಉಳಿಯುವ ಸಾಧ್ಯತೆ ಇದ್ದುದರಿಂದ ಪ್ರವಾಸವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ದೇಶದ ಮುಂಬೈ ಮತ್ತು ದೆಹಲಿಯಲ್ಲಿ ಈಗಾಗಲೇ ಉದ್ಯಮಿಗಳನ್ನು ಆಕರ್ಷಿಸಲು ಪ್ರಚಾರ ಸಭೆಗಳನ್ನು ನಡೆಸಲಾಗಿದೆ. ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂತಹ ಸಭೆಗಳನ್ನು ನಡೆಸುವುದು ಬಾಕಿಯಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande