ರಾಜ್ಯದಲ್ಲಿ ಮುಂದುವರೆದ ಹಿಂಗಾರು ಮಳೆಯ ಅಬ್ಬರ
ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹುಬ್ಬಳ್ಳಿ, ಧಾರವಾಡ, ರಾಯಚೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ದಕ್ಷಿಣ ಕ
karnataka-rain-orange-alert-six-districts-heavy-rain-forecast


ಬೆಂಗಳೂರು, 24 ಅಕ್ಟೋಬರ್ (ಹಿ.ಸ.):

ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಮಳೆಯ ಕೊರತೆಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಹಿಂಗಾರು ಮಳೆ ಕೊಂಚ ಸಮಾಧಾನ ತಂದಿದೆ.

ರಾಜ್ಯದಲ್ಲಿ ಭಾನುವಾರವೂ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಧಾರವಾಡ ನಗರದಲ್ಲಿಯೂ ಮಳೆ ಅಬ್ಬರಿಸಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಮಳೆಯ ಆಗಮನದಿಂದ ಒಣಗುತ್ತಿದ್ದ ಬೆಳೆಗಳಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ.

ರಾಯಚೂರಿನಲ್ಲಿ ಧಾರಾಕಾರ ಮಳೆ

ರಾಯಚೂರು ಜಿಲ್ಲೆಯ ಹಲವೆಡೆ ಶುಕ್ರವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ಪರಿಣಾಮವಾಗಿ ರಸ್ತೆಗಳು ಜಲಾವೃತಗೊಂಡಿದ್ದವು.

ಕಡಲೆ, ಸೂರ್ಯಕಾಂತಿ, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಚೇತರಿಕೆ ನೀಡುವ ನಿರೀಕ್ಷೆಯಿದೆ. ಹಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗಿನಿಂದ ಜಿಟಿಜಿಟಿ ಮಳೆಯಾಗಿದೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ಆರಂಭವಾದ ಮಳೆ ಬೆಳಗ್ಗೆಯೂ ಮುಂದುವರೆದು. ಮೇಖ್ರಿ ವೃತ್ತ, ಹೆಬ್ಬಾಳ, ಬಸವೇಶ್ವರ ನಗರ ಹಾಗೂ ಕೆ.ಆರ್. ವೃತ್ತ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗಿದೆ. ಬೆಳಗಿನ ಮಳೆಯಿಂದಾಗಿ ಮನೆಯಿಂದ ಹೊರಬರುವವರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು.

ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು. ತಗ್ಗು ಪ್ರದೇಶಗಳು, ನೀರು ಹರಿಯುವ ಸೇತುವೆಗಳು ಹಾಗೂ ಜಲಾವೃತ ರಸ್ತೆಗಳ ಬಳಿ ಎಚ್ಚರಿಕೆಯಿಂದ ಸಂಚರಿಸುವುದು ಅಗತ್ಯವಾಗಿದೆ.

-----------------------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande