
ಬೆಂಗಳೂರು, 25 ಅಕ್ಟೋಬರ್ (ಹಿ.ಸ.):
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ನಕಲಿ ಮತ ಚಲಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವುದನ್ನು ಉಲ್ಲೇಖಿಸಿ, ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತೆ ಶಿಲ್ಪಾ ಬಡಮ್ಯನವರ ಅವರು, ಸಂಜೀವಕುಮಾರ್ ನೀರಲಗಿ ಅವರ ಪತ್ನಿ ಆಶಾ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಮತ ಚಲಾಯಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ ಎಂದು ಆರ್. ಅಶೋಕ ತಿಳಿಸಿದ್ದಾರೆ.
ದಿನನಿತ್ಯ ಮತಗಳ್ಳತನದ ಆರೋಪ ಮಾಡುವ ಕಾಂಗ್ರೆಸ್ ನಾಯಕರು, ತಮ್ಮದೇ ಪಕ್ಷದ ಕಾರ್ಯಕರ್ತೆಯ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಉತ್ತರಿಸಬೇಕು. ತಮ್ಮೊಂದಿಗೇ ಬಂದ ಮಹಿಳೆಯ ಪರಿಚಯವಿಲ್ಲ, ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ ಎಂಬ ಸಚಿವರ ಸಮರ್ಥನೆ ಸರಿಯಲ್ಲ ಎಂದು ಅವರು ಟೀಕಿಸಿದ್ದಾರೆ.
ವಿರೋಧ ಪಕ್ಷಗಳ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಕಾಂಗ್ರೆಸ್ ನಾಯಕರು, ಇದೀಗ ತಮ್ಮದೇ ಪಕ್ಷದ ಕಾರ್ಯಕರ್ತೆಯ ವಿರುದ್ಧ ಕೇಳಿಬಂದಿರುವ ನಕಲಿ ಮತದಾನದ ಆರೋಪಕ್ಕೆ ಸ್ಪಷ್ಟನೆ ನೀಡಬೇಕು. ಈ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಗೆ ಉಳಿದಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಮತದಾನ ಪ್ರಜಾಪ್ರಭುತ್ವದ ಪವಿತ್ರ ಹಕ್ಕಾಗಿದ್ದು, ಅದಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳಿದ್ದರೆ ಅವರ ಮೇಲೂ ಕ್ರಮ ಜರುಗಿಸಬೇಕು ಎಂದು ಆರ್. ಅಶೋಕ ಆಗ್ರಹಿಸಿದ್ದಾರೆ.
ದೇಶಕ್ಕೆ ಪ್ರಜಾಪ್ರಭುತ್ವದ ಪಾಠ ಹೇಳುವ ಮೊದಲು ಕಾಂಗ್ರೆಸ್ ತನ್ನ ಪಕ್ಷದೊಳಗಿನ ಪ್ರಜಾಪ್ರಭುತ್ವದ ಪಾವಿತ್ರ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ ಟೀಕಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.