ನಟ ಧನ್ವಿರ ವಿರುದ್ದ ಪ್ರತ್ಯೇಕ ಮೂರು ದೂರು ದಾಖಲು
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಆಪ್ತ ನಟ ಧನ್ವೀರ್ ನಡುವಿನ ವಿವಾದ ಹೊಸ ತಿರುವು ಪಡೆದಿದ್ದು, ಧನ್ವೀರ್ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಮೂರು ಎನ್ಸಿಆರ್ ಪ್ರಕರಣಗಳು ದಾಖಲಾಗಿವೆ.
dhanveir-ncr-case


ಬೆಂಗಳೂರು, 26 ಅಕ್ಟೋಬರ್ (ಹಿ.ಸ.):

ನಟ ದರ್ಶನ್ ಜೈಲು ಸೇರಿದ ಬಳಿಕ ಅವರ ಕುಟುಂಬದ ಬೆಂಬಲಕ್ಕೆ ನಿಂತಿದ್ದ ನಟ ಧನ್ವೀರ್ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ಮನಸ್ತಾಪದ ವದಂತಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ.

ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಈ ವಿವಾದ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ನಟ ಧನ್ವೀರ್ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಎನ್ಸಿಆರ್ಗಳು ದಾಖಲಾಗಿರುವುದು ಪ್ರಸ್ತುತ ಗಾಂಧಿನಗರ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ದಾಖಲಾಗಿರುವ ದೂರುಗಳಲ್ಲಿ ಅವಾಚ್ಯ ಪದಗಳಿಂದ ನಿಂದಿಸಿರುವುದು, ಜೀವ ಬೆದರಿಕೆ ಒಡ್ಡಿರುವುದು ಹಾಗೂ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ಗಂಭೀರ ಆರೋಪಗಳು ಸೇರಿವೆ.

ಮೊದಲನೆಯದಾಗಿ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಎಂಬುವವರು ಧನ್ವೀರ್ ವಿರುದ್ಧ ದೂರು ನೀಡಿದ್ದಾರೆ.

ದರ್ಶನ್ ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ, ಧನ್ವೀರ್ ತಮಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ನಾಗರಾಜ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಎರಡನೇ ಎನ್ಸಿಆರ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಭೋಜರಾಜ ರೈ ಎಂಬುವವರು ಧನ್ವೀರ್ ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇದರ ಜೊತೆಗೆ, ಮೂರನೇ ಎನ್ಸಿಆರ್ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಗೌರವ್ ಎಂಬುವವರು ದೂರು ನೀಡಿದ್ದಾರೆ.

ವಿಮಾನದ ಟಿಕೆಟ್ ಬುಕ್ ಮಾಡಿಸಿದ ಬಳಿಕ ಹಣ ನೀಡದಿರುವುದು ಮತ್ತು ಶಶಿ ಎಂಬುವವರಿಗೆ ಕೊಡಿಸಿದ ಕಾರನ್ನು ಮರಳಿ ನೀಡದೆ, ಈ ಬಗ್ಗೆ ಪ್ರಶ್ನಿಸಿದಾಗ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪಗಳು ಈ ದೂರಿನಲ್ಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande