
ಬೆಂಗಳೂರು, 26 ಅಕ್ಟೋಬರ್ (ಹಿ.ಸ.):
ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬಸಾಪುರ ಬಳಿ ನಡೆದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಅಪಘಾತದ ಬಳಿಕ ಗಾಯಾಳು ರಸ್ತೆಯಲ್ಲಿ ನರಳಾಡುತ್ತಿದ್ದರೂ ಕಾರು ನಿಲ್ಲಿಸಿ ನೆರವು ನೀಡದೆ ಚಾಲಕ ಪರಾರಿಯಾಗಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಳ್ಳೇಗಾಲ ಮೂಲದ ಮೂರ್ತಿ (26) ಗಾಯಗೊಂಡ ಬೈಕ್ ಸವಾರ. ಮೂರು ದಿನಗಳ ಹಿಂದೆ ಬಸಾಪುರ ಬಳಿ ಬೈಕ್ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಫಾರ್ಚುನರ್ ಕಾರು ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮೂರ್ತಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ವಾಹನವನ್ನು ಹಿಂದಕ್ಕೆ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ರಸ್ತೆಯಲ್ಲೇ ನರಳಾಡಿದ ಗಾಯಾಳು
ಅಪಘಾತದಲ್ಲಿ ಮೂರ್ತಿ ಅವರ ಕಾಲಿಗೆ ತೀವ್ರ ಗಾಯವಾಗಿದ್ದು, ಕಾಲು ತುಂಡಾಗಿದೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ವಿಷಯ ತಿಳಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಗಾಯಾಳು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಪೊಲೀಸರು ಪ್ರಕರಣದ ಬಗ್ಗೆ ನಿರ್ಲಕ್ಷ್ಯದಿಂದ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೂರ್ತಿ ಅವರನ್ನು ನಿಮ್ಹಾನ್ಸ್ಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಐಸಿಯು ಹಾಸಿಗೆ ಲಭ್ಯವಿಲ್ಲದ ಕಾರಣ ಚಿಕಿತ್ಸೆ ದೊರೆಯಲಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ನಂತರ ಸ್ನೇಹಿತರು ಮತ್ತು ಸಂಬಂಧಿಕರು ಗಾಯಾಳುವನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದಿದ್ದು, ಕೊನೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಮೂರ್ತಿ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಕಾರಿನಲ್ಲಿದ್ದವರು ಮದ್ಯಪಾನ ಮಾಡಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರ ಕೈಯಲ್ಲಿ ಮದ್ಯದ ಬಾಟಲಿಗಳನ್ನು ಕಂಡಿದ್ದಾಗಿ ಕೆಲವರು ಹೇಳಿರುವುದಾಗಿ ವರದಿಯಾಗಿದೆ. ಆದರೆ, ಈ ಆರೋಪಗಳು ಅಧಿಕೃತವಾಗಿ ದೃಢಪಟ್ಟಿಲ್ಲ.
ಅಪಘಾತಕ್ಕೆ ಸಂಬಂಧಿಸಿದಂತೆ ಕೆಎ 51 ಎಂಡಬ್ಲ್ಯು 8744 ನೋಂದಣಿ ಸಂಖ್ಯೆಯ ಫಾರ್ಚುನರ್ ಕಾರಿನ ಬಗ್ಗೆ ಮಾಹಿತಿ ಲಭ್ಯವಾಗಿದ್ದರೂ, ಘಟನೆ ನಡೆದು ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮೂರ್ತಿ ಅವರಿಗೆ ನ್ಯಾಯ ದೊರಕಿಸಿಕೊಡಲು ಚಾಲಕನನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R