ಮೀಸಲಾತಿ ವಿಚಾರದಲ್ಲಿ ರಾಜಿ ಆಗಲ್ಲ; ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ: ಡಾ. ಜಿ. ಪರಮೇಶ್ವರ
ಮೀಸಲಾತಿ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
SC-appeal-on-reservation


ಬೆಂಗಳೂರು, 26 ಅಕ್ಟೋಬರ್ (ಹಿ.ಸ.):

ಮೀಸಲಾತಿ ವಿಚಾರದಲ್ಲಿ ರಾಜಿ ಆಗುವುದಿಲ್ಲ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿರಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈಕೋರ್ಟ್ ತೀರ್ಪಿನ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲೇಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

ಮುಂದುವರಿದು ಇದನ್ನು ಹೇಗೆ ಸಂವಿಧಾನದ ಒಂಬತ್ತನೇ ಶೆಡ್ಯೂಲ್ ಅಡಿಯಲ್ಲಿ ತಂದು ಶಾಶ್ವತ ರಕ್ಷಣೆ ಒದಗಿಸಬೇಕು ಅನ್ನೋದರ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮೀಸಲಾತಿ ಹೆಚ್ಚಳಕ್ಕೆ ಶಾಶ್ವತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಅನೇಕ ಗೊಂದಲಗಳಿರುವುದು ನಿಜ. ಈ ಹಿಂದೆ ಹೆಚ್. ಆಂಜನೇಯ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಮುಕ್ತವಾಗಿ ಅನುದಾನ ನೀಡುತ್ತಿದ್ದರು. ಸ್ವಾಮೀಜಿಯವರು ₹5 ಕೋಟಿ ಅನುದಾನ ಕೇಳಿದಾಗ ಅದನ್ನು ಮಂಜೂರು ಮಾಡಿದ್ದರು. ಈಗ ಎಲ್ಲ ಇಲಾಖೆಗಳಲ್ಲಿಯೂ ಶೇ.17ರಷ್ಟು ಅನುದಾನವನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಡಬೇಕೆಂಬ ನಿಯಮವಿದೆ.

ಈ ಅನುದಾನವನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸಲಾಗಿದೆ. ಗಂಗಾಕಲ್ಯಾಣ ಯೋಜನೆಯಡಿ ಸಾವಿರಾರು ಫಲಾನುಭವಿಗಳಿಗೆ ಕೊಳವೆಬಾವಿ ಸೌಲಭ್ಯ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ 162 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ರೀತಿಯ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ರಾಜಕೀಯ ಕಾರಣಗಳಿಗಾಗಿ ಗೊಂದಲ ಸೃಷ್ಟಿಸಲಾಯಿತು. ಇದರಿಂದ ಯಾರಿಗೂ ತೊಂದರೆಯಾಗಿಲ್ಲ. ಆ ಸಂದರ್ಭದಲ್ಲಿ ನಾನೇ ಗೃಹ ಸಚಿವನಾಗಿದ್ದೆ. ಆರೋಪಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಲಾಗಿದ್ದ ಎಲ್ಲ ಹಣವೂ ವಾಪಸ್ ಬಂದಿದೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ.

ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ನಾವು ಪ್ರತಿನಿಧಿಸುವ ಸಮುದಾಯಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಏಳಿಗೆ ಹೊಂದದಿದ್ದರೆ ಜನಪ್ರತಿನಿಧಿಗಳಾಗಿರುವ ನಮಗೆ ಯಾವುದೇ ಅರ್ಹತೆ ಇರುವುದಿಲ್ಲ. ಆದ್ದರಿಂದ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮೀಸಲಾತಿ ಪ್ರಮಾಣವನ್ನು ಶೇ.56ರಿಂದ ಶೇ.50ಕ್ಕೆ ಇಳಿಸಿದ್ದು ಆಶ್ಚರ್ಯ ತಂದಿದೆ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ, ಹೈಕೋರ್ಟ್ ಮೀಸಲಾತಿ ಪ್ರಮಾಣವನ್ನು ಶೇ.56ರಿಂದ ಶೇ.50ಕ್ಕೆ ಇಳಿಸಿರುವುದು ಆಶ್ಚರ್ಯ ತಂದಿದೆ. ನ್ಯಾಯಾಧೀಶರನ್ನು ದೂಷಿಸುವ ಉದ್ದೇಶ ನಮಗಿಲ್ಲ. ಆದರೆ, ಜನಸಂಖ್ಯೆಯ ಆಧಾರದಲ್ಲಿ ಹೆಚ್ಚಿಸಲಾಗಿದ್ದ ಮೀಸಲಾತಿಯನ್ನು ಯಾವ ಕಾರಣಕ್ಕಾಗಿ ರದ್ದುಗೊಳಿಸಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದರು.

2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಯವರು ಶೇ.17 ಮತ್ತು ಪರಿಶಿಷ್ಟ ಪಂಗಡದವರು ಶೇ.7ರಷ್ಟಿದ್ದಾರೆ. ಒಟ್ಟಾರೆ ಈ ಸಮುದಾಯಗಳ ಜನಸಂಖ್ಯೆ ಸುಮಾರು ಶೇ.24.1ರಷ್ಟಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕೆಂಬ ಉದ್ದೇಶದಿಂದಲೇ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿತ್ತು.

ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲಾಗಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ. ಆದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿಯನ್ನು ಶೇ.6ರಷ್ಟು ಹೆಚ್ಚಿಸಿದಾಗ ಅದನ್ನು ರದ್ದುಗೊಳಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರ ಅರ್ಥವೇನು ಎಂದು ಪ್ರಶ್ನಿಸಿದರು.

ಮೀಸಲಾತಿಗಾಗಿ ಸ್ವಾಮೀಜಿ ಅವರು 258 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದರು ಅಂದು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದು, ನಾನು ಉಪ ಮುಖ್ಯಮಂತ್ರಿಯಾಗಿದ್ದೆ. ಸ್ವಾಮೀಜಿಯವರು ಸಾವಿರಾರು ಅನುಯಾಯಿಗಳೊಂದಿಗೆ ಪಾದಯಾತ್ರೆ ನಡೆಸಿ ಬೆಂಗಳೂರಿನ ಫ್ರೀಡಂ ಪಾರ್ಕ್ಗೆ ಆಗಮಿಸಿದ್ದರು. ಮಳೆಯ ನಡುವೆಯೂ ಪಾದಯಾತ್ರೆ ನಡೆದಿತ್ತು. ಸ್ವಾಮೀಜಿಯವರು ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಆಗಮಿಸಿದ್ದರು ಎಂದರು.

ಆ ಸಂದರ್ಭದಲ್ಲಿ ರಾಷ್ಟ್ರೀಯ ಹಣಕಾಸು ಆಯೋಗದ ಸಭೆ ನಡೆಯುತ್ತಿತ್ತು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನಾನು ಸಭೆಯಲ್ಲಿ ಭಾಗವಹಿಸಿದ್ದೆವು. ಸ್ವಾಮೀಜಿಯವರನ್ನು ಭೇಟಿ ಮಾಡಿ ಮನವಿ ಸ್ವೀಕರಿಸುವಂತೆ ಮುಖ್ಯಮಂತ್ರಿಗಳು ನನಗೆ ಸೂಚಿಸಿದ್ದರು.

ಅದರಂತೆ ನಾನು ತೆರಳಿ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದೆ. ಸುಮಾರು 15 ಶಾಸಕರು ಕೂಡ ಈ ಸಂದರ್ಭದಲ್ಲಿ ಆಗಮಿಸಿದ್ದರು ಎಂದು ತಿಳಿಸಿದರು.

ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಬೇಕು ಎಂಬುದು ಸ್ವಾಮೀಜಿಯವರ ಪ್ರಮುಖ ಬೇಡಿಕೆಯಾಗಿತ್ತು. ಇದರೊಂದಿಗೆ ಸಮುದಾಯದ ಇತರ ಸಮಸ್ಯೆಗಳನ್ನೂ ಒಳಗೊಂಡ ಮನವಿಯನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶೇ.7ರಷ್ಟು ಮೀಸಲಾತಿ ಕಲ್ಪಿಸಿಯೇ ತೀರುತ್ತೇವೆ ಎಂದು ಅಂದು ಭರವಸೆ ನೀಡಿದ್ದೆ. ಆದರೆ, ಕಾರಣಾಂತರಗಳಿಂದ ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.

ನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 2022ರ ಅಕ್ಟೋಬರ್ನಲ್ಲಿ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿತ್ತು. ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣದಲ್ಲಿಯೂ ಶೇ.3ರಷ್ಟು ಹೆಚ್ಚಳ ಮಾಡಿತ್ತು. ಆ ಮೂಲಕ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಏರಿಸುವ ಸಂಬಂಧ ಆದೇಶ ಹೊರಡಿಸಿತ್ತು.

ಅಂದು ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವಿತ್ತು. ಕೇಂದ್ರದಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರದಲ್ಲಿತ್ತು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ದು, ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಒತ್ತಾಯಿಸಬೇಕಿತ್ತು. ಹಾಗೆ ಮಾಡಿದ್ದರೆ ಬಹುಶಃ ಇಂದಿನ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ಈ ವಿಚಾರದಲ್ಲಿ ಹಿಂದಿನ ಸರ್ಕಾರವನ್ನು ದೂಷಿಸಲು ಹೋಗುವುದಿಲ್ಲ. ಆದರೆ, ಅಂದು ಮೀಸಲಾತಿ ಹೆಚ್ಚಳಕ್ಕೆ ಅಗತ್ಯವಾದ ರಕ್ಷಣೆ ಒದಗಿಸುವ ಪ್ರಯತ್ನ ಮಾಡಲಿಲ್ಲ ಎಂಬುದನ್ನು ಹೇಳಬೇಕಾಗಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ.

ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿರುವ ನಿರ್ಧಾರದ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಿಕೊಂಡು ಬರಲಾಗಿದೆ. ಇಂತಹ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪಿನಿಂದ ಗೊಂದಲ ಉಂಟಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಸಂವಿಧಾನಬದ್ಧವಾಗಿ ದೊರೆಯಬೇಕಾದ ನ್ಯಾಯಯುತ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಮೀಸಲಾತಿಯ ರಕ್ಷಣೆಗೆ ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಪರಿಶಿಷ್ಟ ಪಂಗಡಗಳ ಶೈಕ್ಷಣಿಕ ಸ್ಥಿತಿಯಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಪರಿಶಿಷ್ಟ ಪಂಗಡಗಳಲ್ಲಿ ಸಾಕ್ಷರತಾ ಪ್ರಮಾಣ ಶೇ.49ರಷ್ಟಿದ್ದು, ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ.38ರಷ್ಟಿದೆ.

ದೇಶದ ಒಟ್ಟಾರೆ ಸಾಕ್ಷರತೆ ಶೇ.80ರ ಮಟ್ಟ ತಲುಪಿರುವ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಗಳು ಇನ್ನೂ ಶೇ.50ರ ಮಟ್ಟವನ್ನೂ ತಲುಪದಿರುವುದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರವಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶೈಕ್ಷಣಿಕವಾಗಿ ಮುಂದುವರಿದಾಗ ಮಾತ್ರ ಉದ್ಯೋಗಾವಕಾಶಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಶಿಕ್ಷಣವೇ ಸಮುದಾಯಗಳ ಪ್ರಗತಿಗೆ ಪ್ರಮುಖ ಸಾಧನವಾಗಿದೆ ಎಂದಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande