ನೈಜ ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಂ.ಎಲ್.ಸಿ. ಅನಿಲ್ ಕುಮಾರ್
ನೈಜ ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಂ.ಎಲ್.ಸಿ. ಅನಿಲ್ ಕುಮಾರ್
ವೋಟ್ ಬಚಾವೋ ದೇಶ್ ಬಚಾವೋ ಆಂದೋಲನದ ಬಗ್ಗೆ ಕೋಲಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಎಂ.ಎಲ್.ಸಿ. ಅನಿಲ್ ಕುಮಾರ್ ಮಾತನಾಡಿದರು.


ಕೋಲಾರ, ೨೭ ಅಕ್ಟೋಬರ್ (ಹಿ.ಸ) : ಚುನಾವಣಾ ಆಯೋಗವನ್ನು ಬಳಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು, ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಆರೋಪಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ‘ವೋಟ್ ಬಚಾವೊ–ದೇಶ್ ಬಚಾವೊ’ ಅಭಿಯಾನದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದರು. ಮತದಾನದ ಹಕ್ಕು ಹಾಗೂ ಸಂವಿಧಾನದ ರಕ್ಷಣೆ ಕಾಂಗ್ರೆಸ್ನ ಪ್ರಮುಖ ಜವಾಬ್ದಾರಿಯಾಗಿದೆ ಬಿಜೆಪಿ ರಾಮಮಂದಿರ, ರಾಮನ ಹೆಸರು ಹಾಗೂ ಪುಲ್ವಾಮಾ ದಾಳಿಯಂತಹ ವಿಚಾರಗಳನ್ನು ಮುಂದಿಟ್ಟುಕೊAಡು ಲೋಕಸಭಾ ಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆದಿದೆ. ಮುಂದಿನ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಅರ್ಹ ಮತದಾರರನ್ನು ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ಸಂವಿಧಾನ ಪ್ರತಿಯೊಬ್ಬ ಅರ್ಹ ಪ್ರಜೆಗೂ ಮತದಾನದ ಹಕ್ಕು ನೀಡಿದೆ. ಮತದಾರರ ಪಟ್ಟಿಯಲ್ಲಿ ನೈಜ ಮತದಾರರ ಹೆಸರುಗಳು ಕೈಬೀಳದಂತೆ ಕಾರ್ಯಕರ್ತರು ಜಾಗೃತಿ ವಹಿಸಬೇಕು. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯ ಬಗ್ಗೆಯೂ ಆಕ್ಷೇಪಗಳಿದ್ದು, ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಐಕ್ಯತೆ, ಸಮಗ್ರತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಸಾಧ್ಯ ಎಂದರು.

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ಗೆ ಭದ್ರ ಬುನಾದಿಯಿದ್ದು, ಪಕ್ಷದ ಸಂದೇಶಗಳನ್ನು ತಳಮಟ್ಟಕ್ಕೆ ತಲುಪಿಸಿ ಸಂಘಟನೆ ಬಲಪಡಿಸಬೇಕು. ಪಕ್ಷದ ಬೆಳವಣಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸಿ, ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಂಘಟಿತ ಪ್ರಯತ್ನ ಮಾಡಬೇಕು ಪಕ್ಷದ ಪದಾಧಿಕಾರಿಗಳು ಕೇವಲ ಹುದ್ದೆಗೆ ಸೀಮಿತವಾಗದೆ ಪಕ್ಷಕ್ಕಾಗಿ ದುಡಿಯುವವರಿಗೆ ಅವಕಾಶ ನೀಡಬೇಕು ಎಂದರು.

ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ದೀಪ್ತಿ ಮೇರಿ ವರ್ಗೀಸ್, ಕೆಪಿಸಿಸಿ ವೀಕ್ಷಕ ಮಧುಸೂದನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್ ಮುಂತಾದವರು ಭಾಗಿಯಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande