
ಬ್ರಹ್ಮಾವರ, 28 ಅಕ್ಟೋಬರ್ (ಹಿ.ಸ.):
ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿಯಲ್ಲಿ ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೈಕಾಡಿ ನಿವಾಸಿ ಪ್ರಮೋದ್ ಪೂಜಾರಿಯ ಸಹೋದರ ಪ್ರದೀಪ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈಗಾಗಲೇ ಪ್ರಮುಖ ಆರೋಪಿ ಪ್ರಮೋದ್ ಪೂಜಾರಿಯನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಮಂಗಳವಾರ ರಾತ್ರಿ (ಅ.27) ಬೈಕಾಡಿಯ ಭದ್ರಗಿರಿ ಜಂಕ್ಷನ್ ಬಳಿ ಈ ಘಟನೆ ನಡೆದಿತ್ತು. ಹಣಕಾಸಿನ ವಿಚಾರ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸುಜಿತ್ ಪಿಂಟೋ ಮತ್ತು ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.
ಈ ವೇಳೆ ಪ್ರಮೋದ್ ಪೂಜಾರಿ ಕಬ್ಬಿಣದ ರಾಡ್ನಿಂದ ಸುಜಿತ್ ಪಿಂಟೋ ಅವರ ತಲೆಗೆ ಹಲ್ಲೆ ನಡೆಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಜಿತ್ ಪಿಂಟೋ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R