
ವಿಜಯಪುರ, 28 ಅಕ್ಟೋಬರ್ (ಹಿ.ಸ.)
ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಗೋಡೌನ್ಗೆ ರೈತ ಮುಖಂಡರ ನೇತೃತ್ವದಲ್ಲಿ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು.
ಬಬಲೇಶ್ವರ ತಾಲೂಕು ಅಧ್ಯಕ್ಷ ಸುರೇಶ ಕಿರಸೂರ ಹಾಗೂ ಕೋಲಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಅವರ ನೇತೃತ್ವದಲ್ಲಿ ಅನೇಕ ರೈತರು ಕಾರ್ಖಾನೆ ಆವರಣದಲ್ಲಿ ಜಮಾಯಿಸಿ, ರೈತರ ಸಮಸ್ಯೆಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಕ್ಕರೆ ಗೋಡೌನ್ಗೆ ಬೀಗ ಹಾಕುವ ಮೂಲಕ ತಮ್ಮ ಬೇಡಿಕೆಗಳ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸುರೇಶ್, ರೈತರ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ನ್ಯಾಯಯುತ ಬೇಡಿಕೆಗಳಿಗೆ ಕಾರ್ಖಾನೆ ಆಡಳಿತ ಹಾಗೂ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.
ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದರು. ಗೋಡೌನ್ಗೆ ಬೀಗ ಹಾಕುವ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ರೈತರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಅನೇಕ ರೈತರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande