
ನವದೆಹಲಿ, 28 ಅಕ್ಟೋಬರ್ (ಹಿ.ಸ.):
ಚಂಡಮಾರುತ ಅರ್ನಬ್‌ನ ಪರಿಣಾಮಗಳ ಹಿನ್ನೆಲೆಯಲ್ಲಿ ರೈಲು ಸಂಚಾರ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಹಿರಿಯ ಅಧಿಕಾರಿಗಳೊಂದಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
ರೈಲ್ವೆ ಜಾಲದ 10 ಸ್ಥಳಗಳಲ್ಲಿ ಮರಗಳು ಬಿದ್ದಿದ್ದರಿಂದ ಉಂಟಾಗಿದ್ದ ಸಣ್ಣಪುಟ್ಟ ಅಡಚಣೆಗಳನ್ನು ತಕ್ಷಣವೇ ತೆರವುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ವೈಷ್ಣವ್, ರೈಲುಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದ ಕರಾವಳಿಯಲ್ಲಿ ಯಾನಂ–ಕಾಕಿನಾಡ ಸಮೀಪ ಚಂಡಮಾರುತ ಅರ್ನಬ್ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ. ಚಂಡಮಾರುತದಿಂದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಹಾಗೂ ಜಲಾವೃತ ಉಂಟಾಗುವ ಸಾಧ್ಯತೆ ಇರುವುದರಿಂದ ರೈಲು ಸಂಚಾರದ ಮೇಲೆ ನಿರಂತರ ನಿಗಾ ವಹಿಸಲಾಗಿದೆ.
ಸಂಭಾವ್ಯ ಅಪಾಯಗಳನ್ನು ತಗ್ಗಿಸುವ ಉದ್ದೇಶದಿಂದ ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದ ಕರಾವಳಿ ಮಾರ್ಗಗಳಲ್ಲಿ ಹಲವು ರೈಲುಗಳ ಸಂಚಾರವನ್ನು ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿತ್ತು.
ಪರಿಣಾಮಿತ ಪ್ರದೇಶಗಳಲ್ಲಿನ ರೈಲು ಸಂಚಾರದ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.