ಡಯಾಲಿಸಿಸ್ ರೋಗಿಗಳಿಗೆ ಮನೆಬಾಗಿಲಲ್ಲಿ ಸೇವೆ ನೀಡಲು ಆರೋಗ್ಯ ಇಲಾಖೆ ಸಿದ್ದತೆ
ರಾಜ್ಯದ ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
home-based-dialysis-services-kidney-patients-750-new-ambulances-karnataka


ಬೆಂಗಳೂರು, 28 ಅಕ್ಟೋಬರ್ (ಹಿ.ಸ.):

ರಾಜ್ಯದ ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದರೊಂದಿಗೆ ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ 750 ನೂತನ ಆ್ಯಂಬುಲೆನ್ಸ್ಗಳನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಡಯಾಲಿಸಿಸ್ ಸೇವೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

ಹೆಚ್ಚು ಹೆಚ್ಚು ಆಸ್ಪತ್ರೆಗಳನ್ನು ನಿರ್ಮಿಸುವುದಕ್ಕಿಂತ ಈಗಾಗಲೇ ಇರುವ ಆಸ್ಪತ್ರೆಗಳಲ್ಲಿಯೇ ಉತ್ತಮ ಚಿಕಿತ್ಸೆ ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ 20 ನಿಮಿಷದಲ್ಲಿ ಆ್ಯಂಬುಲೆನ್ಸ್

ರಾಜ್ಯದಲ್ಲಿ 750 ಅತ್ಯಾಧುನಿಕ ಆ್ಯಂಬುಲೆನ್ಸ್ಗಳನ್ನು ಶೀಘ್ರದಲ್ಲೇ ಸೇವೆಗೆ ಸಮರ್ಪಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಎದುರಾದಾಗ 20 ನಿಮಿಷಗಳೊಳಗೆ ಆ್ಯಂಬುಲೆನ್ಸ್ ತಲುಪುವ ಗುರಿ ಹೊಂದಲಾಗಿದೆ.

ನಿಗದಿತ ಸಮಯದಲ್ಲಿ ಆ್ಯಂಬುಲೆನ್ಸ್ ತಲುಪದಿದ್ದಲ್ಲಿ 3,000 ರೂ. ದಂಡ ವಿಧಿಸುವ ಬಗ್ಗೆಯೂ ಸಚಿವರು ಪ್ರಸ್ತಾಪಿಸಿದ್ದಾರೆ.

ಇದಲ್ಲದೆ, ಪ್ರತಿ ತಾಲೂಕು ಆಸ್ಪತ್ರೆಯಲ್ಲಿಯೂ ಐದು ಐಸಿಯು ಹಾಸಿಗೆಗಳನ್ನು ನಿರ್ಮಿಸುವ ಯೋಜನೆ ಕೈಗೊಳ್ಳಲಾಗುತ್ತಿದೆ.

ಇದರಿಂದ ತಾಲೂಕು ಮಟ್ಟದಲ್ಲಿಯೇ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತ್ವರಿತ ಚಿಕಿತ್ಸೆ ಒದಗಿಸಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಶೀಘ್ರದಲ್ಲೇ ಮಹಿಳಾ ಆರೋಗ್ಯ ನೀತಿ ಜಾರಿ

ಮಹಿಳೆಯರ ಆರೋಗ್ಯಕ್ಕೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಶೀಘ್ರದಲ್ಲೇ ಮಹಿಳಾ ಆರೋಗ್ಯ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕ್ಯಾನ್ಸರ್ ಔಷಧಿಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಮಾಧ್ಯಮಗಳ ಸಹಕಾರ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದ ಸಚಿವರು,

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ದೊರೆಯುವಂತೆ ಕೇಂದ್ರ ಸರ್ಕಾರ ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande