
ವಿಜಯಪುರ, 29 ಅಕ್ಟೋಬರ್ (ಹಿ.ಸ.)
ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಯುವಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಪ್ಪನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತ ಯುವಕನನ್ನು ಬಸವನಬಾಗೇವಾಡಿ ಪಟ್ಟಣದ ಬಸವನಗರ ನಿವಾಸಿ ಸಿದ್ದರಾಮ ಹೂವಿನಳ್ಳಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಯುವಕ ಬಸವರಾಜ ಮಿಣಜಗಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಿರಜಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮಾರ್ಕಪ್ಪನಹಳ್ಳಿ ಕ್ರಾಸ್ ಸಮೀಪ ಬೈಕ್ನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ವೇಳೆ ಸವಾರನ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮ ಹೂವಿನಳ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಾಳು ಬಸವರಾಜ ಮಿಣಜಗಿ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮಿರಜಿಗೆ ಸ್ಥಳಾಂತರಿಸಲಾಗಿದೆ.
ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
ಯುವಕನ ಸಾವಿನಿಂದ ಕುಟುಂಬಸ್ಥರು ಹಾಗೂ ಆತ್ಮೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande