ಬ್ಯಾಕೋಡ ಗ್ರಾ.ಪಂ.ಗೆ ಜಿ.ಪಂ. ಸಿಇಒ ಆನಂದ ಪ್ರಕಾಶ ಮೀನಾ ಭೇಟಿ: ಕುಡಿಯುವ ನೀರಿನ ಸಮಸ್ಯೆ ತ್ವರಿತ ಪರಿಹಾರಕ್ಕೆ ಸೂಚನೆ
ವಿಜಯಪುರ, 29 ಅಕ್ಟೋಬರ್ (ಹಿ.ಸ.) ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆನಂದ ಪ್ರಕಾಶ ಮೀನಾ ಅವರು ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮದಲ್ಲಿನ ಕುಡಿಯುವ ನೀರು, ಅಂಗನವಾಡಿ ಕೇಂದ್ರ, ಗ್ರಂಥಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ
ಸಿಇಒ ಅವರಿಂದ ಅಭಿವೃದ್ಧಿ ಪರಿಶೀಲನೆ


ವಿಜಯಪುರ, 29 ಅಕ್ಟೋಬರ್ (ಹಿ.ಸ.)

ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆನಂದ ಪ್ರಕಾಶ ಮೀನಾ ಅವರು ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮದಲ್ಲಿನ ಕುಡಿಯುವ ನೀರು, ಅಂಗನವಾಡಿ ಕೇಂದ್ರ, ಗ್ರಂಥಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಇಒ, ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಎರಡು ದಿನಗಳೊಳಗಾಗಿ ಪರಿಹರಿಸಿ, ಸಾರ್ವಜನಿಕರಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ಎರಡು ಹೊಸ ಕೊಳವೆಬಾವಿಗಳ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಿಇಒ ಆನಂದ ಪ್ರಕಾಶ ಮೀನಾ ಅವರು, ಮಕ್ಕಳಿಗೆ ದೊರೆಯುತ್ತಿರುವ ಪೌಷ್ಟಿಕ ಆಹಾರ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಕೇಂದ್ರಗಳ ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಇದೇ ವೇಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಗ್ರಂಥಾಲಯದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು. ಗ್ರಂಥಾಲಯದ ಮುಂಭಾಗದಲ್ಲಿ ಮಳೆನೀರು ಹಾಗೂ ಕೊಳಚೆ ನೀರು ನಿಲ್ಲದಂತೆ ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯ ಉದ್ಯೋಗಕ್ಕೆ ಆದ್ಯತೆ

ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮದಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸಿ ಕೈಗೆತ್ತಿಕೊಳ್ಳಬೇಕು ಎಂದು ಸಿಇಒ ಸೂಚಿಸಿದರು. ಹೆಚ್ಚಿನ ಸಂಖ್ಯೆಯ ಕೂಲಿಕಾರರಿಗೆ ಕೆಲಸ ದೊರೆಯುವಂತೆ ಯೋಜನೆ ರೂಪಿಸಿ, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವಲ್ಲಿ ಗ್ರಾಮ ಪಂಚಾಯತಿ ಆಡಳಿತ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಯುವಜನರ ನೋಂದಣಿ ಹಾಗೂ ತೆರಿಗೆ ವಸೂಲಿಗೆ ಸೂಚನೆ

ಯುವಜನರನ್ನು ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ಕಾರ್ಯವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಗದಿತ ಗುರಿಗೆ ಅನುಗುಣವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆ ವಸೂಲಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಪಂಚಾಯತಿಯ ಆದಾಯ ಹೆಚ್ಚಳವಾಗುವಂತೆ ಬಾಕಿ ತೆರಿಗೆ ವಸೂಲಿಗೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು, ಸ್ವಚ್ಛತೆ, ಮೂಲಸೌಕರ್ಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಂದ ಬರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಸಿಇಒ ಆನಂದ ಪ್ರಕಾಶ ಮೀನಾ ಹೇಳಿದರು.

ಈ ಸಂದರ್ಭದಲ್ಲಿ ಬ್ಯಾಕೋಡ ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಲೋಣಿ, ಗ್ರಾಮ ಪಂಚಾಯತಿ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande