
ಗದಗ, 29 ಅಕ್ಟೋಬರ್ (ಹಿ.ಸ.)
ಗದಗ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಿಷ್ಟಾಚಾರದ ಪ್ರಕಾರ ಆಸನ ವ್ಯವಸ್ಥೆ, ವೇದಿಕೆ ಅಲಂಕಾರ ಹಾಗೂ ಗಣ್ಯರ ಸನ್ಮಾನ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ನವೆಂಬರ್ 1ರಂದು ಬೆಳಿಗ್ಗೆ 7.30ಕ್ಕೆ ಗದಗ-ಬೆಟಗೇರಿ ನಗರಸಭೆ ಪದವಿಪೂರ್ವ ಕಾಲೇಜು ಆವರಣದಿಂದ ಕಲಾತಂಡಗಳೊಂದಿಗೆ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ತಿಳಿಸಿದರು.
ಪೊಲೀಸ್ ಪಡೆ, ಗೃಹರಕ್ಷಕ ದಳ ಹಾಗೂ ಭಾರತ ಸೇವಾದಳದಿಂದ ಪರೇಡ್ ಮತ್ತು ಪಥಸಂಚಲನ ನಡೆಯಲಿವೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಪ್ರದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಮತ್ತು ಅಲ್ಪೋಪಹಾರದ ವ್ಯವಸ್ಥೆ ಕಲ್ಪಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ನೆರವಾಗಲು ಆಂಬ್ಯುಲೆನ್ಸ್ ಸೌಲಭ್ಯ ಸಿದ್ಧವಾಗಿರಬೇಕು. ಶಿಷ್ಟಾಚಾರದಂತೆ ಅತಿಥಿ ಗಣ್ಯರಿಗೆ ಆಹ್ವಾನ ನೀಡುವುದು ಹಾಗೂ ಆಮಂತ್ರಣ ಪತ್ರಿಕೆಗಳ ಮುದ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ರಾಜ್ಯೋತ್ಸವದ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP