
ಬೆಂಗಳೂರು, 29 ಅಕ್ಟೋಬರ್ (ಹಿ.ಸ.):
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಆದರೆ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರ ಸೇರಿದಂತೆ ಇತರ ರಾಜ್ಯಗಳಲ್ಲಿ ನಡೆದಿರುವ ಪ್ರಕ್ರಿಯೆ ಕುರಿತು ನಮ್ಮ ಆಕ್ಷೇಪವಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆಯನ್ನು ನಾವು ವಿರೋಧಿಸಿಲ್ಲ. ಇತರ ರಾಜ್ಯಗಳಲ್ಲಿ ನಡೆದಿರುವ ಪ್ರಕ್ರಿಯೆಯ ಬಗ್ಗೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
“ನಾವು ನಡೆಸಿದ ಪ್ರತಿಭಟನೆಗಳು ಹಾಗೂ ನೀಡಿದ ತರಬೇತಿಯ ಪರಿಣಾಮವಾಗಿ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಪ್ರಕ್ರಿಯೆ ನಡೆಯಬೇಕು ಎಂಬುದು ನಮ್ಮ ಆಶಯ” ಎಂದು ಹೇಳಿದರು.
ಮತದಾರರ ಪಟ್ಟಿಯಿಂದ ಸುಮಾರು ಒಂದು ಕೋಟಿ ಹೆಸರುಗಳನ್ನು ತೆಗೆದುಹಾಕಿರುವುದನ್ನು ಒಪ್ಪುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಸರುಗಳನ್ನು ತೆಗೆದುಹಾಕಿರುವ ಕ್ರಮವನ್ನು ಸಮರ್ಥಿಸಿಕೊಂಡರು.
“ಮೃತಪಟ್ಟವರು, ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಹೆಸರು ನೋಂದಾಯಿಸಿಕೊಂಡವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ” ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R