
ಮಂಡ್ಯ, 29 ಅಕ್ಟೋಬರ್ (ಹಿ.ಸ.):
ಕಾಲೇಜು ಮುಗಿಸಿಕೊಂಡು ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ತೊಣ್ಣೂರು ಕೆರೆಯಲ್ಲಿ ನಡೆದಿದೆ.
ಮೃತರನ್ನು ಕೆ.ಆರ್. ಪೇಟೆ ತಾಲೂಕಿನ ದಾಸನದೊಡ್ಡಿ ಕೊಪ್ಪಲು ಗ್ರಾಮದ ಯಶ್ವಂತ್ (17) ಹಾಗೂ ಹೊಸೂರು ಗ್ರಾಮದ ರಾಜು (16) ಎಂದು ಗುರುತಿಸಲಾಗಿದೆ.
ಇಬ್ಬರೂ ಚಿನಕುರುಳಿ ಗ್ರಾಮದ ಎಸ್ಟಿಜಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಕಾಲೇಜು ಮುಗಿಸಿಕೊಂಡ ಬಳಿಕ ಇಬ್ಬರೂ ತೊಣ್ಣೂರು ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ವಿದ್ಯಾರ್ಥಿಗಳ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಶೋಕ ಆವರಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆರೆಯಿಂದ ಮೃತದೇಹಗಳನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R