
ಗದಗ, 03 ಅಕ್ಟೋಬರ್ (ಹಿ.ಸ.):
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್, ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಜ್ಞಾನೇಶ್ ಕುಮಾರ್ ಅವರ ಹಿಂದೆ ನಿಂತಿರುವ ವ್ಯಕ್ತಿಗಳ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಹಾಗೂ ದೇಶದ ಬಡವರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ಅವರು ದೇಶದ ಜನರಲ್ಲಿ ಮತದಾನದ ಹಕ್ಕಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.
ಗದಗ ಜಿಲ್ಲೆಯಾದ್ಯಂತ ಸುಮಾರು 12,500 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನದ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಜನರ ಮತಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪವನ್ನು ಎಚ್.ಕೆ. ಪಾಟೀಲ್ ಪ್ರಸ್ತಾಪಿಸಿದರು. ಮತದಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡದೆ ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಕೇಳಲಾಗಿದೆ ಎಂದು ಅವರು ಆರೋಪಿಸಿದರು.
‘ನಮ್ಮ ಮತ, ನಮ್ಮ ಹಕ್ಕು’ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತದಾರರ ಹಕ್ಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಡಿ.ಆರ್. ಪಾಟೀಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP