ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಗದಗ, 03 ಅಕ್ಟೋಬರ್ (ಹಿ.ಸ.): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಹಂಚಿಕೆ ಯೋಜನೆ (ಎಸ್ಸಿಪಿ/ಟಿಎಸ್ಪಿ)ಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳು ನಿಗದಿತ ಕಾಲಾವಧಿಯೊಳಗೆ ತಲುಪುವಂತೆ ಅಧಿಕಾರಿ
ಫೋಟೋ


ಗದಗ, 03 ಅಕ್ಟೋಬರ್ (ಹಿ.ಸ.):

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಹಂಚಿಕೆ ಯೋಜನೆ (ಎಸ್ಸಿಪಿ/ಟಿಎಸ್ಪಿ)ಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳು ನಿಗದಿತ ಕಾಲಾವಧಿಯೊಳಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿಪಿ/ಟಿಎಸ್ಪಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶ ನೀಡದೆ, ಅರ್ಹತೆ ಹಾಗೂ ನಿಯಮಾವಳಿಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ವಿಳಂಬವಾಗದೆ ಶೀಘ್ರವಾಗಿ ದೊರೆಯುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ವಿವಿಧ ಕಾರಣಗಳಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬವಾಗದಂತೆ ಎಚ್ಚರ ವಹಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಬಳಕೆಯಾಗದೆ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್ ಮಾತನಾಡಿ, ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನುದಾನದ ಸದ್ಬಳಕೆಯೊಂದಿಗೆ ಯೋಜನೆಗಳ ಭೌತಿಕ ಪ್ರಗತಿಯನ್ನೂ ಖಚಿತಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ಇಲಾಖೆಯ ಅಧಿಕಾರಿಗಳು ನಿಷ್ಕಾಳಜಿ ವಹಿಸಬಾರದು ಎಂದು ಹೇಳಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಎಸ್ಸಿಪಿ/ಟಿಎಸ್ಪಿ ಯೋಜನೆಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿಯನ್ನು ಪರಿಶೀಲಿಸಲಾಯಿತು. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗಿರುವ ಸಮಸ್ಯೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande