ಎಸ್ಐಆರ್ ಫಾರಂ–7 ಸಲ್ಲಿಸಿದವರ ವಿರುದ್ಧ ಅನಗತ್ಯ ಎಫ್ಐಆರ್ ಬೇಡ: ಬಿಜೆಪಿ ಮನವಿ
ಬೆಂಗಳೂರು, 03 ಅಕ್ಟೋಬರ್ (ಹಿ.ಸ.): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಫಾರಂ–7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯವಾಗಿ ಎಫ್ಐಆರ್ ದಾಖಲಿಸದಂತೆ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರಿಗೆ ಮನವಿ ಸಲ್ಲಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.
bjp-appeals-against-unnecessary-firs-against-sir-form-7-applicants


ಬೆಂಗಳೂರು, 03 ಅಕ್ಟೋಬರ್ (ಹಿ.ಸ.):

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಫಾರಂ–7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯವಾಗಿ ಎಫ್ಐಆರ್ ದಾಖಲಿಸದಂತೆ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರಿಗೆ ಮನವಿ ಸಲ್ಲಿಸಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಪಕ್ಷದ ಹಿರಿಯ ನಾಯಕರ ನಿಯೋಗ ಶನಿವಾರ ಡಿಜಿ–ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿತು.

ಫಾರಂ–7 ಮೂಲಕ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಕುರಿತು ಆಕ್ಷೇಪಣೆ ಸಲ್ಲಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿದ್ದು, ಅರ್ಜಿಗಳನ್ನು ಸಲ್ಲಿಸಿದ ಮಾತ್ರಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

“ಫಾರಂ–7 ಸಲ್ಲಿಸುವುದು ಚುನಾವಣಾ ಆಯೋಗ ನೀಡಿರುವ ಅವಕಾಶ. ಅರ್ಜಿ ಸರಿಯಾಗಿದ್ದರೆ ಚುನಾವಣಾಧಿಕಾರಿಗಳು ಪರಿಶೀಲಿಸಿ ಅಂಗೀಕರಿಸುತ್ತಾರೆ; ತಪ್ಪಿದ್ದರೆ ತಿರಸ್ಕರಿಸುತ್ತಾರೆ.

ಆದರೆ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಬಾರದು. ಈ ಸಂಬಂಧ ತಕ್ಷಣ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಫಾರಂ–7 ಅರ್ಜಿಗಳನ್ನು ಸಲ್ಲಿಸುವುದಕ್ಕೆ ಕಾನೂನಿನಲ್ಲಿ ನಿರ್ಬಂಧವಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದೆ. ಸುಳ್ಳು ಮಾಹಿತಿ ಅಥವಾ ಘೋಷಣೆ ನೀಡಿರುವ ಪ್ರಕರಣಗಳಲ್ಲಿ ಚುನಾವಣಾ ಕಾನೂನಿನಡಿ ಸೂಕ್ತ ಪ್ರಕ್ರಿಯೆ ಅನುಸರಿಸಬೇಕೇ ಹೊರತು, ಅರ್ಜಿ ಸಲ್ಲಿಸಿದವರ ವಿರುದ್ಧ ಸ್ವಯಂಚಾಲಿತವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಬಾರದು ಎಂದು ನಿಯೋಗ ಹೇಳಿದೆ.

ಇದೇ ವೇಳೆ, ಫಾರಂ–7 ಅರ್ಜಿದಾರರ ವೈಯಕ್ತಿಕ ವಿವರಗಳು ಹಾಗೂ ಸಹಿ ಸೇರಿದಂತೆ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆಯೂ ಬಿಜೆಪಿ ಕಳವಳ ವ್ಯಕ್ತಪಡಿಸಿದ್ದು, ದಾಖಲೆಗಳು ಸಾರ್ವಜನಿಕ ವಲಯಕ್ಕೆ ಸೋರಿಕೆಯಾದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದೆ.

“ನಮ್ಮ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸುವುದನ್ನು ತಕ್ಷಣ ನಿಲ್ಲಿಸಬೇಕು. ಮುಂದುವರಿದರೆ ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande