
ಬೆಂಗಳೂರು, 03 ಅಕ್ಟೋಬರ್ (ಹಿ.ಸ.):
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಅಕ್ಟೋಬರ್ 3 ಮತ್ತು 4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.
ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಅಕ್ಟೋಬರ್ 4ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆಯಾಗಬಹುದು.
ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಎಚ್ಚರಿಕೆ ಪಟ್ಟಿಯ ಪ್ರಕಾರ, ಅಕ್ಟೋಬರ್ 3 ಮತ್ತು 4ರಂದು ಕರಾವಳಿ ಹಾಗೂ ಉತ್ತರ ಒಳನಾಡಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 5 ಮತ್ತು 6ರಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R