
ಬೆಂಗಳೂರು, 30 ಅಕ್ಟೋಬರ್ (ಹಿ.ಸ.):
ರಾಜ್ಯದ ಎಲ್ಲ ತಾಲೂಕುಗಳು ಹಾಗೂ ಪ್ರಮುಖ ಹೋಬಳಿಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ.
ಬೆಂಕಿ ಅವಘಡ ಸೇರಿದಂತೆ ವಿವಿಧ ತುರ್ತು ಸಂದರ್ಭಗಳಲ್ಲಿ ಜನರಿಗೆ ತ್ವರಿತವಾಗಿ ನೆರವು ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ 2ನೇ ಅಖಿಲ ಭಾರತ ಅಗ್ನಿಶಾಮಕ ಸೇವೆಗಳ ಕ್ರೀಡಾಕೂಟ-2026ಕ್ಕೆ ಚಾಲನೆ ನೀಡಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ದೇಶದ ಪ್ರತಿಯೊಂದು ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ಸ್ಥಾಪಿಸಬೇಕೆಂಬ ಕೇಂದ್ರ ಸರ್ಕಾರದ ಆಶಯಕ್ಕೆ ಅನುಗುಣವಾಗಿ ರಾಜ್ಯದಲ್ಲಿಯೂ ಠಾಣೆಗಳ ವಿಸ್ತರಣೆಗೆ ಯೋಜನೆ ರೂಪಿಸಲಾಗುತ್ತಿದೆ.
ಇದರಿಂದ ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಶೀಘ್ರವಾಗಿ ತಲುಪಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ, ಆಧುನಿಕ ಸೌಲಭ್ಯಗಳು ಹಾಗೂ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಹೇಳಿದರು.
ರಾಜ್ಯದ ಎಲ್ಲ ತಾಲೂಕುಗಳು ಮಾತ್ರವಲ್ಲದೆ ಪ್ರಮುಖ ಹೋಬಳಿಗಳಲ್ಲಿಯೂ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸುವುದರಿಂದ ಗ್ರಾಮೀಣ ಪ್ರದೇಶಗಳಿಗೂ ತುರ್ತು ಸೇವೆಗಳನ್ನು ವಿಸ್ತರಿಸಲು ಅನುಕೂಲವಾಗಲಿದೆ.
ಬೆಂಕಿ ಅವಘಡ ಹಾಗೂ ಇತರ ತುರ್ತು ಪರಿಸ್ಥಿತಿಗಳಲ್ಲಿ ಸಕಾಲದಲ್ಲಿ ಸ್ಪಂದಿಸಿ ಜೀವ ಮತ್ತು ಆಸ್ತಿಪಾಸ್ತಿಗಳ ನಷ್ಟವನ್ನು ತಗ್ಗಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R