
ಬೆಂಗಳೂರು, 30 ಅಕ್ಟೋಬರ್ (ಹಿ.ಸ.):
ಫುಟ್ಪಾತ್ಗಳ ಮೇಲೆ ವಾಹನ ಚಲಾಯಿಸುವ ಮೂಲಕ ಪಾದಚಾರಿಗಳಿಗೆ ತೊಂದರೆ ಉಂಟುಮಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಫುಟ್ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಪ್ರಸ್ತುತ ವಿಧಿಸಲಾಗುತ್ತಿರುವ 500 ರೂ. ದಂಡವನ್ನು 5,000 ರೂ.ಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ.
ಸಾರಿಗೆ ಇಲಾಖೆಯು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅಂತಿಮ ನಿರ್ಧಾರ ಇನ್ನಷ್ಟೇ ಹೊರಬೀಳಬೇಕಿದೆ. ಪ್ರಸ್ತಾವಿತ ನಿಯಮದ ಪ್ರಕಾರ, ಮೊದಲ ಬಾರಿ ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ 5,000 ರೂ. ಹಾಗೂ ಎರಡನೇ ಬಾರಿ ಇದೇ ತಪ್ಪು ಪುನರಾವರ್ತಿಸಿದರೆ 10,000 ರೂ. ದಂಡ ವಿಧಿಸುವ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಕೆಲ ವಾಹನ ಸವಾರರು ಫುಟ್ಪಾತ್ಗಳ ಮೇಲೆ ಕಾರು ಹಾಗೂ ದ್ವಿಚಕ್ರ ವಾಹನಗಳನ್ನು ಚಲಾಯಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಫುಟ್ಪಾತ್ಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಆದರೆ, ವಾಹನ ಸವಾರರು ತೆರವುಗೊಂಡ ಫುಟ್ಪಾತ್ಗಳನ್ನೇ ಸಂಚಾರಕ್ಕೆ ಬಳಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇಂತಹ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ದಂಡ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಇತರ ಸಂಚಾರ ಉಲ್ಲಂಘನೆಗಳಿಗೂ ದಂಡ ಹೆಚ್ಚಳ ಸಾಧ್ಯತೆ
ಫುಟ್ಪಾತ್ ಮೇಲೆ ವಾಹನ ಚಲಾಯಿಸುವುದರ ಜತೆಗೆ ಇತರ ಸಂಚಾರ ನಿಯಮಗಳ ಉಲ್ಲಂಘನೆಗೂ ದಂಡದ ಮೊತ್ತ ಹೆಚ್ಚಿಸುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ. ಫುಟ್ಪಾತ್ಗಳ ಮೇಲೆ ವಾಹನ ನಿಲುಗಡೆ ಮಾಡುವುದು, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು, ಅನಧಿಕೃತ ಸ್ಥಳಗಳಲ್ಲಿ ವಾಹನ ನಿಲುಗಡೆ,
ನೋ ಪಾರ್ಕಿಂಗ್ ವಲಯದಲ್ಲಿ ವಾಹನ ನಿಲ್ಲಿಸುವುದು ಹಾಗೂ ಸಿಗ್ನಲ್ ಉಲ್ಲಂಘನೆ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆಗಳಿಗೆ ಹೆಚ್ಚಿನ ದಂಡ ವಿಧಿಸುವ ಪ್ರಸ್ತಾವನೆ ಇದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಪಾದಚಾರಿಗಳ ಸುರಕ್ಷತೆ ಕಾಪಾಡುವುದು ಹಾಗೂ ರಸ್ತೆಗಳಲ್ಲಿ ಶಿಸ್ತು ಮೂಡಿಸುವುದು ಸರ್ಕಾರದ ಉದ್ದೇಶವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R