
ಬೆಂಗಳೂರು, 30 ಅಕ್ಟೋಬರ್ (ಹಿ.ಸ.):
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಪಟಾಕಿ ಸಿಡಿಸಲು ಸಮಯ ನಿಗದಿಪಡಿಸಲಾಗಿದೆ.
ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳ ಅನ್ವಯ ಪಟಾಕಿ ಸಿಡಿಸುವ ಕುರಿತು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.
ನ್ಯಾಯಾಲಯದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪಟಾಕಿ ಸಿಡಿಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.
ನಿಗದಿತ ಎರಡು ಗಂಟೆಗಳ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ನೀಡಬಾರದು.
ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಗೋದಾಮುಗಳನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನ್ಯಾಯಾಲಯದ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R