
ಮಂಡ್ಯ, 30 ಅಕ್ಟೋಬರ್ (ಹಿ.ಸ.):
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಅ.31) ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ ಕೈಗೊಂಡಿದ್ದಾರೆ.
ಸುಮಾರು 2 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಡಿ.ಕೆ. ಶಿವಕುಮಾರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸಾವಿರಾರು ಜನರನ್ನು ಸೇರಿಸಲು ಕಾಂಗ್ರೆಸ್ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಕಟೌಟ್ಗಳು ಹಾಗೂ ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ವೇದಿಕೆ ನಿರ್ಮಾಣ ಸೇರಿದಂತೆ ಕಾರ್ಯಕ್ರಮದ ಸಿದ್ಧತೆಗಳನ್ನು ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ ಪರಿಶೀಲಿಸಿದರು.
ಸಿಎಂ ಕಾರ್ಯಕ್ರಮಕ್ಕೆ 1,200ಕ್ಕೂ ಹೆಚ್ಚು ಪೊಲೀಸರ ಭದ್ರತೆ
ಡಿ.ಕೆ. ಶಿವಕುಮಾರ್ ಅವರ ಭೇಟಿ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸ್ ಇಲಾಖೆ, ಭದ್ರತೆಗಾಗಿ 1,200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ರೂಪಿಸಲಾಗಿದೆ. ಎಸ್ಪಿ, ಎಎಸ್ಪಿ, ಆರು ಮಂದಿ ಡಿವೈಎಸ್ಪಿಗಳು, 30 ಇನ್ಸ್ಪೆಕ್ಟರ್ಗಳು, 94 ಸಬ್ಇನ್ಸ್ಪೆಕ್ಟರ್ಗಳು, 161 ಎಎಸ್ಐಗಳು ಸೇರಿದಂತೆ ಒಟ್ಟು 1,200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R