
ಬಾಗಲಕೋಟೆ, 31 ಅಕ್ಟೋಬರ್ (ಹಿ.ಸ.)
ತಮ್ಮನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳವರು ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಮುಧೋಳ ತಾಲೂಕಿನ ಲೋಕಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡುತ್ತಾ, “ನನ್ನದು ತುಂಬಾ ಡೇಂಜರ್ ಲೈಫ್ ಇದೆ. ಯಾವುದಾದರೂ ವಿಷಯದಲ್ಲಿ ಸಿಕ್ಕಿಬಿದ್ದರೆ ನನ್ನನ್ನು ಮುಗಿಸಲು ಕಾಂಗ್ರೆಸ್ ಹಾಗೂ ಬಿಜೆಪಿಯವರು ಕಾಯುತ್ತಿದ್ದಾರೆ” ಎಂದು ಹೇಳಿದರು.
ತಮ್ಮ ಕಾರ್ಖಾನೆಗೆ ಈ ಹಿಂದೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ವಿವಿಧ ರೀತಿಯಲ್ಲಿ ತಪಾಸಣೆ ನಡೆಸಿದ್ದರು. ಕಾರ್ಖಾನೆಯ ಕಾಟಾ ಸೇರಿದಂತೆ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಪ್ರಮಾಣಪತ್ರ ನೀಡಿ ಅಧಿಕಾರಿಗಳು ತೆರಳಿದ್ದರು ಎಂದು ಯತ್ನಾಳ ತಿಳಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳೂ ಸಹ ರೈತರೊಂದಿಗೆ ಪಾರದರ್ಶಕವಾಗಿ ವ್ಯವಹರಿಸಬೇಕು ಎಂದು ಅವರು ಒತ್ತಾಯಿಸಿದರು. ಕಬ್ಬಿನ ತೂಕ ಮಾಡುವ ಕಾಟಾದಲ್ಲಿ ಯಾವುದೇ ರೀತಿಯ ಮೋಸ ಅಥವಾ ಅವ್ಯವಹಾರಕ್ಕೆ ಅವಕಾಶ ನೀಡಬಾರದು. ರೈತರಿಗೆ ಅನುಮಾನ ಮೂಡದ ರೀತಿಯಲ್ಲಿ ತೂಕ ಪ್ರಕ್ರಿಯೆ ನಡೆಯಬೇಕು ಎಂದು ಹೇಳಿದರು.
ಕಾರ್ಖಾನೆ ಮಾಲೀಕರು ತಮ್ಮ ಲಾಭ-ನಷ್ಟದ ಲೆಕ್ಕಾಚಾರವನ್ನು ರೈತರ ಮುಂದೆಯೇ ಮುಕ್ತವಾಗಿ ಚರ್ಚಿಸಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವ ಕುರಿತು ನಿರ್ಧಾರ ಕೈಗೊಳ್ಳಬೇಕು. ರೈತರು ಹಾಗೂ ಕಾರ್ಖಾನೆಗಳ ನಡುವೆ ಪರಸ್ಪರ ವಿಶ್ವಾಸ ಮೂಡಿದಾಗ ಮಾತ್ರ ಕಬ್ಬು ಉದ್ಯಮದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಕಬ್ಬು ಬೆಳೆಗಾರರು ಉತ್ಪಾದನಾ ವೆಚ್ಚ, ಕಾರ್ಮಿಕರ ವೆಚ್ಚ, ನೀರಾವರಿ, ರಸಗೊಬ್ಬರ ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಿ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ಅವರಿಗೆ ನ್ಯಾಯಯುತ ಬೆಲೆ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಸರ್ಕಾರವೂ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಾರ್ಖಾನೆ ಮಾಲೀಕರು ಹಾಗೂ ರೈತರ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಯತ್ನಾಳ ಆಗ್ರಹಿಸಿದರು.
ಇದೇ ವೇಳೆ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಮಹತ್ವವನ್ನು ಸರ್ಕಾರ ಅರಿತುಕೊಂಡು ಅವುಗಳನ್ನು ಜಾರಿಗೆ ತರಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು. ರೈತರಿಗೆ ಅವರ ಉತ್ಪನ್ನದ ಬೆಲೆಗೆ ನ್ಯಾಯ ದೊರೆತರೆ, ಕೃಷಿ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಲಿದೆ. ಇದರಿಂದ ರೈತರ ಜೊತೆಗೆ ಸಕ್ಕರೆ ಕಾರ್ಖಾನೆಗಳಿಗೂ ದೀರ್ಘಾವಧಿಯಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.
ಲೋಕಾಪುರದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಯತ್ನಾಳ, ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು. ರೈತರ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲು ಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ರೈತ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಬ್ಬಿಗೆ ಸೂಕ್ತ ಬೆಲೆ, ತೂಕದಲ್ಲಿ ಪಾರದರ್ಶಕತೆ ಹಾಗೂ ರೈತರಿಗೆ ನ್ಯಾಯಯುತ ಪಾವತಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರೈತರು ಹೋರಾಟ ಮುಂದುವರಿಸಿರುವ ಹಿನ್ನೆಲೆಯಲ್ಲಿ ಯತ್ನಾಳ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande