ಬಾಗಲಕೋಟೆಯಲ್ಲಿ ವಿಶ್ವದರ್ಜೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಆಗ್ರಹ
ಬಾಗಲಕೋಟೆ, 31 ಅಕ್ಟೋಬರ್ (ಹಿ.ಸ.) ಜಿಲ್ಲೆಯ ಕ್ರಿಕೆಟ್ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಬಾಗಲಕೋಟೆ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ವಿಶ್ವದರ್ಜೆಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಬೇಕೆಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕ್ರಿಕೆಟ್ ಅಸೋಸಿಯ
ಕ್ರಿಕೆಟ್ ಮೈದಾನಕ್ಕೆ ಆಗ್ರಹ


ಬಾಗಲಕೋಟೆ, 31 ಅಕ್ಟೋಬರ್ (ಹಿ.ಸ.)

ಜಿಲ್ಲೆಯ ಕ್ರಿಕೆಟ್ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಬಾಗಲಕೋಟೆ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ವಿಶ್ವದರ್ಜೆಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಬೇಕೆಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕ್ರಿಕೆಟ್ ಅಸೋಸಿಯೇಷನ್ಗಳು ಹಾಗೂ ಕ್ರಿಕೆಟ್ ಕ್ಲಬ್ಗಳ ಪ್ರತಿನಿಧಿಗಳು ಬಿಟಿಡಿಎ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುವುದರಿಂದ ಜಿಲ್ಲೆಯ ಯುವ ಹಾಗೂ ಪ್ರತಿಭಾವಂತ ಕ್ರಿಕೆಟ್ ಆಟಗಾರರಿಗೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆ ದೊರೆಯಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕ್ರಿಕೆಟ್ ಕ್ಷೇತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರಿದ್ದರೂ, ಅವರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಮೂಲಸೌಕರ್ಯ ಮತ್ತು ತರಬೇತಿ ಸೌಲಭ್ಯಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣದ ಅಗತ್ಯವಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಕುರಿತು ಜಿಲ್ಲೆಯ ಎಲ್ಲಾ ಕ್ರಿಕೆಟ್ ಅಸೋಸಿಯೇಷನ್ಗಳು ಹಾಗೂ ಕ್ಲಬ್ಗಳ ಪರವಾಗಿ ಬಿಟಿಡಿಎ ಅಧ್ಯಕ್ಷರಾದ ಪ್ರಕಾಶ್ ತಪಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಪಿಚ್, ಅಭ್ಯಾಸ ಮೈದಾನ, ಆಟಗಾರರಿಗೆ ಅಗತ್ಯವಿರುವ ಡ್ರೆಸ್ಸಿಂಗ್ ರೂಮ್, ಪೆವಿಲಿಯನ್, ಪ್ರೇಕ್ಷಕರ ಗ್ಯಾಲರಿ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಆಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿದಾರರು ಆಗ್ರಹಿಸಿದರು.

ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅನೇಕ ಯುವಕರು ಕ್ರಿಕೆಟ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದು, ಪ್ರತಿಭೆಯನ್ನು ಹೊಂದಿದ್ದಾರೆ. ಆದರೆ ಸೂಕ್ತ ಮೈದಾನ, ತರಬೇತಿ ಮತ್ತು ಸ್ಪರ್ಧಾತ್ಮಕ ಅವಕಾಶಗಳ ಕೊರತೆಯಿಂದಾಗಿ ಹಲವರು ತಮ್ಮ ಪ್ರತಿಭೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ.

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣವಾದರೆ ಸ್ಥಳೀಯ ಆಟಗಾರರಿಗೆ ನಿಯಮಿತವಾಗಿ ಉತ್ತಮ ಗುಣಮಟ್ಟದ ತರಬೇತಿ ಮತ್ತು ಪಂದ್ಯಾವಳಿಗಳಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ ಎಂದು ಪ್ರತಿನಿಧಿಗಳು ತಿಳಿಸಿದರು.

ಇಂತಹ ಕ್ರೀಡಾಂಗಣ ನಿರ್ಮಾಣದಿಂದ ಬಾಗಲಕೋಟೆ ಜಿಲ್ಲೆಯ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯುವುದರ ಜೊತೆಗೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಸಹ ಅವಕಾಶ ಸಿಗಲಿದೆ. ಇದರಿಂದ ಜಿಲ್ಲೆಯ ಕ್ರೀಡಾ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯುವ ಸಾಧ್ಯತೆ ಇದೆ. ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜತೆಗೆ ಆರೋಗ್ಯಕರ ಜೀವನಶೈಲಿಗೆ ಪ್ರೋತ್ಸಾಹ ನೀಡುವಲ್ಲಿ ಇಂತಹ ಕ್ರೀಡಾ ಮೂಲಸೌಕರ್ಯಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ನ್ಯಾಯವಾದಿ ಚಂದ್ರಶೇಖರ ರಾಠೋಡ್, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಂತೋಷ್ ಹೋಕ್ರಾಣಿ ಹಾಗೂ ಕ್ರಿಕೆಟ್ ಅಸೋಸಿಯೇಷನ್ಗಳ ಪ್ರತಿನಿಧಿ ಉದಯ್ ಅಂಗಡಿ ಸೇರಿದಂತೆ ಕ್ರಿಕೆಟ್ ಕ್ಷೇತ್ರದ ವಿವಿಧ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಾಗಲಕೋಟೆಯನ್ನು ಕ್ರಿಕೆಟ್ ಕ್ಷೇತ್ರದ ಪ್ರಮುಖ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಜಿಲ್ಲೆಯ ಯುವ ಆಟಗಾರರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ಕ್ರಿಕೆಟ್ ಸಂಘಟನೆಗಳ ಪ್ರಮುಖ ಬೇಡಿಕೆಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande