
ಕಲಬುರಗಿ, 31 ಅಕ್ಟೋಬರ್ (ಹಿ.ಸ.):
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ ಅದ್ಧೂರಿಯಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು, ಕಾರ್ಯಕ್ರಮದ ಸ್ಥಳಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿರುವ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪ್ರತಿಭಟನಾನಿರತ ಕಬ್ಬು ಬೆಳೆಗಾರ ರೈತರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಟೆಂಟ್ಗಳನ್ನು ಕಿತ್ತೆಸೆದು, ಅಲ್ಲಿದ್ದ ಕುರ್ಚಿಗಳನ್ನು ಎಸೆದು ಅಸಮಾಧಾನ ಹೊರಹಾಕಿದರು.
ಕಾರ್ಯಕ್ರಮದಲ್ಲಿ ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರನ್ನು ರೈತರು ಸುತ್ತುವರಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಕಬ್ಬು ಬೆಳೆಗಾರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ಅಗತ್ಯವೇನಿತ್ತು ಎಂದು ರೈತರು ಪ್ರಶ್ನಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನವೇ ತಮ್ಮ ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ಬಿಇಒ ಅವರಿಗೆ ಮನವಿ ಮಾಡಿದ್ದರೂ, ಕಾರ್ಯಕ್ರಮ ಆಯೋಜಿಸಿರುವುದಕ್ಕೆ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ಬಿಇಒ ಭರವಸೆ ನೀಡಿದ್ದರೂ ಪ್ರತಿಭಟನಾಕಾರರ ಆಕ್ರೋಶ ಕಡಿಮೆಯಾಗಲಿಲ್ಲ. ರೈತರ ಸಂಕಷ್ಟಗಳಿಗೆ ಸ್ಪಂದಿಸದೆ ಸಂಭ್ರಮಾಚರಣೆಗೆ ಆದ್ಯತೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಫಜಲಪುರ ಪಟ್ಟಣ ಬಂದ್ ಮಾಡಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಘಟನೆಯಿಂದಾಗಿ ಗುರುಭವನದ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R