ಮಕ್ಕಳ ಹಾಜರಾತಿ, ಅಕ್ಷರ ದಾಸೋಹದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಿ: ಅಶ್ವಿಜ ಬಿ.ವಿ.
ತುಮಕೂರು, 31 ಅಕ್ಟೋಬರ್ (ಹಿ.ಸ.): ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ನಿರಂತರ ಆ್ಯಪ್ ಮೂಲಕ ಬೆಳಗ್ಗೆ ಮತ್ತು ಮಧ್ಯಾಹ್ನ ಹಾಜರಾತಿ ದಾಖಲಿಸಬೇಕು. ಇದರಲ್ಲಿ ವಿಫಲರಾದ ಶಿಕ್ಷಕರು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲ
ಪ್ರಗತಿ ಪರಿಶೀಲನಾ ಸಭೆ


ತುಮಕೂರು, 31 ಅಕ್ಟೋಬರ್ (ಹಿ.ಸ.):

ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ನಿರಂತರ ಆ್ಯಪ್ ಮೂಲಕ ಬೆಳಗ್ಗೆ ಮತ್ತು ಮಧ್ಯಾಹ್ನ ಹಾಜರಾತಿ ದಾಖಲಿಸಬೇಕು. ಇದರಲ್ಲಿ ವಿಫಲರಾದ ಶಿಕ್ಷಕರು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಎಚ್ಚರಿಕೆ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ನಿರಂತರ ಆ್ಯಪ್‌ನಲ್ಲಿ ಹಾಜರಾತಿ ದಾಖಲಿಸುವ ಪ್ರಗತಿ ಹಾಗೂ ಮಕ್ಕಳು ಶಾಲೆಗೆ ಗೈರುಹಾಜರಾಗುತ್ತಿರುವುದಕ್ಕೆ ಕಾರಣಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಅರ್ಹ ಎಲ್ಲ ಮಕ್ಕಳ ಹಾಜರಾತಿಯನ್ನು ನಿಯಮಾನುಸಾರ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳಿಗೆ ವಿತರಿಸಲಾಗುತ್ತಿರುವ ಶಾಲಾ ಸಮವಸ್ತ್ರದ ಶೂ ಮತ್ತು ಸಾಕ್ಸ್‌ಗಳ ಬಗ್ಗೆಯೂ ಮಾಹಿತಿ ಪಡೆದ ಅವರು, ಅರ್ಹ ಎಲ್ಲ ಮಕ್ಕಳಿಗೂ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರತಿದಿನ ಹಾಜರಾತಿ ದಾಖಲಿಸುವುದು ಕಡ್ಡಾಯ

ಮಕ್ಕಳ ಹಾಜರಾತಿ ದಾಖಲಿಸುವ ನಿರಂತರ ಆ್ಯಪ್ ಬಳಕೆಯ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಪ್ರತಿದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಬೇಕು. ಹಾಜರಾತಿ ದಾಖಲಿಸುವ ಕಾರ್ಯದ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳು ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಅಕ್ಷರ ದಾಸೋಹದ ಗುಣಮಟ್ಟ ಕಾಪಾಡಿ

ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ವಿತರಿಸುವ ಆಹಾರದ ಗುಣಮಟ್ಟವನ್ನು ಕಾಪಾಡಬೇಕು. ವಿಶೇಷವಾಗಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಯ ಕುರಿತು ಅಕ್ಷರ ದಾಸೋಹ ಅಧಿಕಾರಿಗಳು ಪ್ರತಿದಿನ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು.

ಶಾಲಾವಾರು ಎಷ್ಟು ಮಕ್ಕಳು ಮೊಟ್ಟೆ ಸೇವಿಸುತ್ತಾರೆ ಹಾಗೂ ಎಷ್ಟು ಮಕ್ಕಳು ಮೊಟ್ಟೆಯ ಬದಲಿಗೆ ಬಾಳೆಹಣ್ಣು ಪಡೆಯುತ್ತಾರೆ ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಅದರ ಆಧಾರದ ಮೇಲೆ ಅಗತ್ಯ ಮೇಲ್ವಿಚಾರಣೆ ನಡೆಸಬೇಕು ಎಂದರು.

ಮೊಟ್ಟೆ ಸೇವನೆಯಿಂದ ಮಕ್ಕಳಿಗೆ ದೊರೆಯುವ ಪೌಷ್ಟಿಕಾಂಶ ಹಾಗೂ ಆರೋಗ್ಯದ ಪ್ರಯೋಜನಗಳ ಕುರಿತು ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ದೃಷ್ಟಿಯಿಂದ ಅಕ್ಷರ ದಾಸೋಹ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande