ಹಾಲಿನ ಬೆಲೆ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಪ್ರತಿಭಟನೆ
ವಿಜಯಪುರ, 31 ಅಕ್ಟೋಬರ್ (ಹಿ.ಸ.) ರಾಜ್ಯ ಸರ್ಕಾರ ನವೆಂಬರ್ 1ರಿಂದ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಲು ಕೈಗೊಂಡಿರುವ ನಿರ್ಧಾರವನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಹಾಲಿನ
ಹಾಲು ಬೆಲೆ ಇಳಿಕೆಗೆ ಆಗ್ರಹ


ವಿಜಯಪುರ, 31 ಅಕ್ಟೋಬರ್ (ಹಿ.ಸ.)

ರಾಜ್ಯ ಸರ್ಕಾರ ನವೆಂಬರ್ 1ರಿಂದ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಲು ಕೈಗೊಂಡಿರುವ ನಿರ್ಧಾರವನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹಾಲಿನ ಬೆಲೆ ಏರಿಕೆಯಿಂದ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಜೀವನ ನಿರ್ವಹಣೆಯ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಲು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯ ವಸ್ತುವಾಗಿದ್ದು, ಅದರ ಬೆಲೆ ಏರಿಕೆಯ ಪರಿಣಾಮ ನೇರವಾಗಿ ಬಡವರು, ಮಧ್ಯಮ ವರ್ಗದ ಕುಟುಂಬಗಳು ಹಾಗೂ ಮಕ್ಕಳ ಮೇಲೆ ಬೀಳಲಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ SUCI ಮುಖಂಡ ಸಂಜು ಜಾದವ್, ರಾಜ್ಯ ಸರ್ಕಾರ ಹಾಲಿನ ಬೆಲೆಯನ್ನು ಏಕಾಏಕಿ ಪ್ರತಿ ಲೀಟರ್ಗೆ ₹8 ಹೆಚ್ಚಿಸುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಜನಸಾಮಾನ್ಯರ ಬದುಕಿನ ಮೇಲೆ ಪರಿಣಾಮ ಬೀರುವಂತಹ ಬೆಲೆ ಏರಿಕೆ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸರ್ಕಾರ ಜನರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹಾಲಿನ ದರ ಹೆಚ್ಚಳದಿಂದ ಕೇವಲ ಹಾಲಿನ ಖರೀದಿ ವೆಚ್ಚ ಮಾತ್ರವಲ್ಲದೆ, ಹಾಲಿನಿಂದ ತಯಾರಾಗುವ ಮೊಸರು, ಮಜ್ಜಿಗೆ, ಚಹಾ, ಕಾಫಿ ಸೇರಿದಂತೆ ಹಲವು ಉತ್ಪನ್ನಗಳ ಬೆಲೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ದಿನನಿತ್ಯದ ಕುಟುಂಬ ಖರ್ಚು ಮತ್ತಷ್ಟು ಹೆಚ್ಚಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಸರ್ಕಾರವು ಬೆಲೆ ಏರಿಕೆ ನಿಯಂತ್ರಿಸುವ ಬದಲು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಹಾಕುವ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಹಾಲಿನ ದರ ಹೆಚ್ಚಳದ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ SUCI ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನಸಾಮಾನ್ಯರಿಗೆ ಹೊರೆಯಾಗುವ ಬೆಲೆ ಏರಿಕೆಗಳನ್ನು ನಿಯಂತ್ರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande