
ಮಂಡ್ಯ, 31 ಅಕ್ಟೋಬರ್ (ಹಿ.ಸ.):
ಈಜಲು ತೆರಳಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗೊಳ ಪಂಪ್ಲೈನ್ ರಸ್ತೆಯ ವರುಣ ನಾಲೆಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪಾರ್ಥಸಾರಥಿ ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಇ. ವ್ಯಾಸಂಗ ಮಾಡುತ್ತಿದ್ದರು.
ಶುಕ್ರವಾರ ಸ್ನೇಹಿತರೊಂದಿಗೆ ವರುಣ ನಾಲೆಗೆ ಈಜಲು ತೆರಳಿದ್ದ ಇಬ್ಬರೂ, ನಾಲೆಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರೂ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ಘಟನೆಯನ್ನು ಗಮನಿಸಿದ ಅವರ ಸ್ನೇಹಿತರು ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ತುರ್ತು ರಕ್ಷಣಾ ತಂಡ ಶೋಧ ಕಾರ್ಯಾಚರಣೆ ನಡೆಸಿದ್ದು, ಶನಿವಾರ ಅರ್ಜುನ್ ಅವರ ಮೃತದೇಹವನ್ನು ನಾಲೆಯಿಂದ ಹೊರತೆಗೆದಿದ್ದಾರೆ.
ನಾಪತ್ತೆಯಾಗಿರುವ ಪಾರ್ಥಸಾರಥಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R