
ಬೆಂಗಳೂರು, 31 ಅಕ್ಟೋಬರ್ (ಹಿ.ಸ.):
ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜನ್ಮದಿನದ ಅಂಗವಾಗಿ ರಾಜ್ಯದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿಧಾನಸೌಧದ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾ ವಿಧಿ ಬೋಧಿಸಿದರು.
ದೇಶದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಎಲ್ಲರೂ ಅರಿತುಕೊಂಡು ರಾಷ್ಟ್ರದ ಸಮಗ್ರತೆ ಹಾಗೂ ಐಕ್ಯತೆಯನ್ನು ಎತ್ತಿಹಿಡಿಯಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು, ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂಬ ಸಂದೇಶವನ್ನು ಪ್ರತಿಜ್ಞೆಯ ಮೂಲಕ ಸಾರಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳಾದ ಪಂಕಜ್ ಕುಮಾರ್ ಪಾಂಡೆ, ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿ ಉಪಸ್ಥಿತರಿದ್ದು, ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ಸಂಕಲ್ಪ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R