
ಉಡುಪಿ, 31 ಅಕ್ಟೋಬರ್ (ಹಿ.ಸ.);
ಜಿಲ್ಲೆಯ ಪೆರುಡೂರಿನಲ್ಲಿ ಯುವಕ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಪ್ರೀತಿಯ ವಿಚಾರವಾಗಿ ಉಂಟಾದ ವಿವಾದದ ಬಳಿಕ ಪ್ರದೀಪ್ ಮೇಲೆ ಹಲ್ಲೆ ನಡೆದಿದ್ದು, ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ ಎಂಟು ವರ್ಷಗಳಿಂದ ಪ್ರೀತಿಯ ಸಂಬಂಧ ಹೊಂದಿದ್ದ ಪ್ರದೀಪ್ ಪೂಜಾರಿ ಅವರ ಬದುಕು ದುರಂತ ಅಂತ್ಯ ಕಂಡಿದೆ. ಪ್ರೀತಿಯ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಪ್ರದೀಪ್ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ತಮ್ಮ ಮೇಲೆ ನಡೆದ ಹಲ್ಲೆ ಕುರಿತು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.
ಆದರೆ, ಪ್ರದೀಪ್ ನೀಡಲು ಮುಂದಾಗಿದ್ದ ದೂರನ್ನು ಪೊಲೀಸರು ಸ್ವೀಕರಿಸಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಲ್ಲೆ ಪ್ರಕರಣದಲ್ಲಿ ನ್ಯಾಯ ದೊರೆಯದ ಅಸಹಾಯಕತೆಯಿಂದಲೇ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಕುಟುಂಬದವರ ಆರೋಪವಾಗಿದೆ.
ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ದೂರು ಸ್ವೀಕರಿಸುವಲ್ಲಿ ಪೊಲೀಸ್ ಇಲಾಖೆ ಕರ್ತವ್ಯ ಲೋಪ ಎಸಗಿದೆಯೇ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರದೀಪ್ ಪೂಜಾರಿ ಸಾವಿಗೆ ನ್ಯಾಯ ಒದಗಿಸಬೇಕು, ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R