
ಬೆಳಗಾವಿ, 04 ಅಕ್ಟೋಬರ್ (ಹಿ.ಸ.):
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಲಾಯಿತು. ಮುತಗಾ, ಬಾಳೇಕುಂದ್ರಿ ಕೆ.ಎಚ್., ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ., ಸುಳೇಭಾವಿ, ಮಾರಿಹಾಳ ಹಾಗೂ ಸುಳಗಾ ಯಳ್ಳೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ ನೆರವೇರಿಸಿದರು.
ಮುತಗಾ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹90 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಸುಮಾರು ₹75 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಹೊನ್ನಿಹಾಳ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹46 ಲಕ್ಷ ಹಾಗೂ ಬಾಳೇಕುಂದ್ರಿ ಬಿ.ಕೆ. ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹96 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸುಳೇಭಾವಿ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿಯೂ ಸುಮಾರು ₹90 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಮಾರಿಹಾಳ ಗ್ರಾಮದಿಂದ ರೈತರ ಹೊಲಗದ್ದೆಗಳಿಗೆ ತೆರಳುವ ಹಳ್ಳಿಮಾರ್ ರಸ್ತೆ ಸೇರಿದಂತೆ ಮೂರು ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸುಮಾರು ₹1.05 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯಲಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಇದಕ್ಕೂ ಮೊದಲು ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು. ಮುಂದಿನ ವರ್ಷ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಗ್ರಾಮದಲ್ಲಿ ಅಗತ್ಯ ಮೂಲಸೌಕರ್ಯ ಮತ್ತು ಸೌಲಭ್ಯ ಕಲ್ಪಿಸುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಸುಳಗಾ ಯಳ್ಳೂರು ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ಗ್ರಾಮದೊಳಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮುತಗಾ ಗ್ರಾಮದಲ್ಲಿ ಕಾಮಗಾರಿಗಳ ಚಾಲನೆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಹಾಗೂ ಕೇಂದ್ರದಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಅಂಗನವಾಡಿಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಭಿವೃದ್ಧಿಯೇ ಆದ್ಯತೆ
ವಿವಿಧ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಸಾರ್ವಜನಿಕರ ಸುಗಮ ಸಂಚಾರ, ಉತ್ತಮ ನೈರ್ಮಲ್ಯ ಹಾಗೂ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಮೂಲ ಉದ್ದೇಶವಾಗಿದೆ ಎಂದು ಹೇಳಿದರು.
ಕ್ಷೇತ್ರದ ಯಾವುದೇ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗಬಾರದು. ಜನರ ಅಗತ್ಯಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಎಲ್ಲ ಗ್ರಾಮಗಳಲ್ಲೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ರಸ್ತೆ, ಚರಂಡಿ ಹಾಗೂ ಗ್ರಾಮೀಣ ಸಂಪರ್ಕ ವ್ಯವಸ್ಥೆ ಸುಧಾರಿಸುವ ಮೂಲಕ ಜನರ ದೈನಂದಿನ ಬದುಕನ್ನು ಸುಗಮಗೊಳಿಸುವುದರ ಜೊತೆಗೆ ರೈತರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿವಿಧ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು, ರೈತರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.